ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಎಗೆ ತಡೆ ಕೋರಿ ಸುಪ್ರೀಂ ಕೋರ್ಟ್‌ಗೆ ಅಸಾದುದ್ದೀನ್‌ ಒವೈಸಿ ಅರ್ಜಿ

ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್‌ ಒವೈಸಿ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
Published 16 ಮಾರ್ಚ್ 2024, 14:56 IST
Last Updated 16 ಮಾರ್ಚ್ 2024, 14:56 IST
ಅಕ್ಷರ ಗಾತ್ರ

ನವದೆಹಲಿ: ಪೌರತ್ವ (ತಿದ್ದುಪಡಿ) ಕಾಯ್ದೆಯ (ಸಿಎಎ) ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಲೇವಾರಿ ಮಾಡುವವರೆಗೂ, ಪೌರತ್ವ ತಿದ್ದುಪಡಿ ನಿಯಮಗಳನ್ನು ಜಾರಿಗೊಳಿಸುವುದಕ್ಕೆ ತಡೆ ನೀಡಬೇಕು ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್‌ ಒವೈಸಿ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಅರ್ಜಿಗಳ ವಿಚಾರಣೆ ಬಾಕಿ ಇರುವಂತೆ ಭಾರತದ ಪೌರತ್ವ ಕೋರಿ ಸಲ್ಲಿಕೆ ಆಗುವ ಅರ್ಜಿಗಳನ್ನು ಪೌರತ್ವ ಕಾಯ್ದೆ– 1955ರ ಸೆಕ್ಷನ್‌ 6ಬಿ ಅನ್ವಯ ಪರಿಗಣಿಸದಂತೆ ಪ್ರತಿವಾದಿಗಳಿಗೆ (ಕೇಂದ್ರ ಸರ್ಕಾರ) ನಿರ್ದೇಶನ ನೀಡುವಂತೆಯೂ ಅವರು ಮನವಿ ಮಾಡಿದ್ದಾರೆ.

ಸಿಎಎಯು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜೊತೆ ಸಂಬಂಧ ಹೊಂದಿದೆ. ಅಸ್ಸಾಂನಲ್ಲಿ ಈಗಾಗಲೇ ಎನ್‌ಆರ್‌ಸಿ ಪ್ರಕ್ರಿಯೆ ಮುಕ್ತಾಯವಾಗಿದೆ. ದೇಶದ ಎಲ್ಲೆಡೆ ಈ ಪ್ರಕ್ರಿಯೆ ಆರಂಭಿಸುವಂತೆ ಹೇಳಲಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಕೇಂದ್ರ ಸರ್ಕಾರವೇ ಸಿಎಎಅನ್ನು 4 ವರ್ಷ ಜಾರಿಗೊಳಿಸಿರಲಿಲ್ಲ. ಹೀಗಾಗಿ ಈಗ ತಡೆ ನೀಡುವುದರಿಂದ ಪ್ರತಿವಾದಿಗಳ ವಿಷಯದಲ್ಲಿ ಪೂರ್ವಗ್ರಹ ಪೀಡಿತರಾಗಿ ಕ್ರಮ ಕೈಗೊಂಡಂತೆಯೂ ಆಗುವುದಿಲ್ಲ ಎಂದೂ ಹೇಳಲಾಗಿದೆ.

ಸಿಎಎಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಲೇವಾರಿ ಆಗುವವರೆಗೆ ಪೌರತ್ವ ತಿದ್ದುಪಡಿ ನಿಯಮಗಳು– 2024ನ್ನು ಜಾರಿಗೊಳಿಸದಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಮಾರ್ಚ್‌ 19ರಂದು ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್‌ ಶುಕ್ರವಾರ ಹೇಳಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT