ಬುಧವಾರ, 15 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಣಿಪುರ ಸಂಘರ್ಷ: ಇಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೇತೃತ್ವದಲ್ಲಿ ಸರ್ವಪಕ್ಷ ಸಭೆ

Published 24 ಜೂನ್ 2023, 2:31 IST
Last Updated 24 ಜೂನ್ 2023, 2:31 IST
ಅಕ್ಷರ ಗಾತ್ರ

ನವದೆಹಲಿ: ಮಣಿಪುರದ ಸದ್ಯದ ಸ್ಥಿತಿಗತಿ ಬಗ್ಗೆ ಚರ್ಚಿಸಿ ಪರಿಹಾರ ಹುಡುಕಲು ಇಂದು (ಶನಿವಾರ) ಕೇಂದ್ರ ಗೃಹ ಸಚಿವ ಅಮಿತಾ ಶಾ ಅವರು ಸರ್ವಪಕ್ಷಗಳ ಸಭೆ ನಡೆಸಲಿದ್ದಾರೆ.

ದೆಹಲಿಯಲ್ಲಿ ಇಂದು ಮಧ್ಯಾಹ್ನ 3 ಗಂಟೆಗೆ ಸಭೆ ನಿಗದಿಯಾಗಿದೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ್‌ ಬಿಸ್ವಾ ಶರ್ಮಾ ಅವರು ಅಮಿತ್ ಶಾ ಅವರನ್ನು ಭೇಟಿ ಮಾಡಿ ಚರ್ಚಿಸಿದ ಬಳಿಕ ಈ ಪ್ರಕಟಣೆ ಹೊರಬಿದ್ದಿದೆ.

ಮೇ 3ರಿಂದ ಮಣಿಪುರದಲ್ಲಿ ಹಿಂಸಾತ್ಮಕ ಘಟನೆಗಳು ನಡೆಯುತ್ತಿರುವುದರಿಂದ, ರಾಜ್ಯ ಸರ್ಕಾರ ತಕ್ಷಣವೇ ಜಾರಿಗೆ ಬರುವಂತೆ ಜೂನ್ 25ರವರೆಗೆ ಇಂಟರ್ನೆಟ್ ನಿಷೇಧಿಸಿ ಆದೇಶ ಹೊರಡಿಸಿದೆ.

ಮಣಿಪುರ ಪೂರ್ವ ಭಾಗದ ತಂಗ್ಜಿಂಗ್‌, ಕಾಂಗ್ಚುಪ್ ಭಾಗಕ್ಕೆ ಸೇರಿದ ಗೆಲ್ಜಾಂಗ್ ಮತ್ತು ಸಿಂಗ್ಡಾ ಹಳ್ಳಿಗಳಲ್ಲಿ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಮತ್ತೆ ಗುಂಡಿನ ದಾಳಿ ನಡೆಸಿದ್ದಾರೆ. ಅಸ್ಸಾಂ ರೈಫಲ್ಸ್‌ ‍ಪಡೆಯ ಯೋಧರು ಘಟನಾ ಸ್ಥಳಕ್ಕೆ ತೆರಳಿದ್ದು, ಅನಾಹುತಗಳ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಿಷ್ಣುಪುರ ಜಿಲ್ಲೆಯ ಕ್ವಾಕ್ಟಾ ಪಟ್ಟಣದ ಮೋರಿಯೊಂದರ ಬಳಿ ನಿಲ್ಲಿಸಿದ್ದ ಕಾರಿನಲ್ಲಿದ್ದ ಬಾಂಬ್‌ ಸ್ಫೋಟಗೊಂಡು ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೋದಿ ಮೌನವನ್ನು ಪ್ರಶ್ನಿಸಲು ಕಾಂಗ್ರೆಸ್ ಸಿದ್ಧತೆ

ನವದೆಹಲಿ: ಮಣಿಪುರದ ಸ್ಥಿತಿಗತಿ ಬಗ್ಗೆ ಚರ್ಚಿಸಲು ಇಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕರೆದಿರುವ ಸಭೆಯಲ್ಲಿ ಕೇಂದ್ರ ಸರ್ಕಾರದ ವೈಫಲ್ಯ ಮತ್ತು ಪ್ರಧಾನಿ ನರೇಂದ್ರ ಮೋದಿಗೆ ಮೌನವನ್ನು ಪ್ರಶ್ನಿಸಲು ವಿಪಕ್ಷಗಳು ಸಿದ್ಧತೆ ನಡೆಸಿವೆ.

ಸರ್ಕಾರದ ಪಕ್ಷಪಾತಿ ಧೋರಣೆ ಮುಂದುವರಿದಿದೆ. ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿರುವ ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಹೇರಿಕೆಗೆ ನಿರ್ಲಕ್ಷ್ಯವಹಿಸಿರುವ ಬಗ್ಗೆ ಕೇಂದ್ರವನ್ನು ತರಾಟೆ ತೆಗೆದುಕೊಳ್ಳುವ ನಿರೀಕ್ಷೆಯಿದೆ.

‘ಸರ್ವಪಕ್ಷಗಳ ಸಭೆಯಲ್ಲಿ ಮೋದಿ ಅವರ ಅನುಪಸ್ಥಿತಿಯು ಅವರ ಹೇಡಿತನ ಮತ್ತು ಸಮಸ್ಯೆ ಬಗೆಹರಿಸಲು ಇಷ್ಟವಿಲ್ಲದಿರುವುದನ್ನು ಎತ್ತಿ ತೋರಿಸುತ್ತದೆ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಟ್ವೀಟ್‌ ಮೂಲಕ ಟೀಕಿಸಿದ್ದಾರೆ.

ಪ್ರಧಾನಿ ಮೋದಿ ಅಮೆರಿಕ ಪ್ರವಾಸದಲ್ಲಿರುವಾಗ ಸರ್ವಪಕ್ಷಗಳ ಸಭೆ ಕರೆದಿರುವುದಕ್ಕೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕೂಡ ಕಟುವಾಗಿ ಟೀಕಿಸಿದ್ದಾರೆ.

‘ದೇಶದಲ್ಲಿ ಸರ್ವಪಕ್ಷಗಳ ಸಭೆ ಕರೆಯುವುದು ಪ್ರಧಾನಿ ಅವರ ಜವಾಬ್ದಾರಿ. ಈ ಸಭೆಯು ಮೋದಿ ಅವರಿಗೆ ಮಹತ್ವದ್ದಾಗಿಲ್ಲವೇ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT