ಹೈದರಾಬಾದ್: ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರನ್ನು ಭೇಟಿಯಾಗಿ ₹1 ಕೋಟಿ ಮೊತ್ತದ ಪರಿಹಾರದ ಚೆಕ್ ಅನ್ನು ಹಸ್ತಾಂತರಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ಸುರಿದ ಭಾರಿ ಮಳೆಯಿಂದಾಗಿ ಆಂಧ್ರಪ್ರದೇಶ ಮತ್ತು ತೆಲಂಗಾಣ ತತ್ತರಿಸಿದೆ. ಹಲವೆಡೆ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಅಪಾರ ಪ್ರಮಾಣದ ಆಸ್ತಿ–ಪಾಸ್ತಿ ನಷ್ಟವಾಗಿದೆ. ಜನರು ಸಾಕಷ್ಟು ತೊಂದರೆಗೆ ಒಳಗಾಗಿದ್ದು, ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ತಂಡಗಳು ಕಾರ್ಯಾಚರಣೆಯಲ್ಲಿ ತೊಡಗಿವೆ.
ಅದರಲ್ಲೂ, ಆಂಧ್ರಪ್ರದೇಶದ ವಿಜಯವಾಡ ನಗರ ಹೆಚ್ಚು ಬಾಧಿತವಾಗಿದ್ದು, ಬಹುತೇಕ ನಗರ ಜಲಾವೃತವಾಗಿದ್ದು ಜನರು ಪರಿತಪಿಸುವಂತಾಗಿದೆ. ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದ್ದರೆ, ಜನರಿಗೆ ಆಹಾರ, ನೀರು ಹಾಗೂ ಔಷಧಿಗಳನ್ನು ಪೂರೈಸುವುದಕ್ಕಾಗಿ ಹೆಲಿಕಾಪ್ಟರ್ ಮತ್ತು ಡ್ರೋನ್‌ಗಳನ್ನು ನಿಯೋಜನೆ ಮಾಡಲಾಗಿದೆ.
ತೆಲುಗು ನಟರು ಹಾಗೂ ಇತರರು ಪರಿಹಾರ ನಿಧಿಗೆ ದೇಣಿಗೆ ನೀಡುತ್ತಿದ್ದಾರೆ. ನಟರಾದ ಚಿರಂಜೀವಿ, ಜೂನಿಯರ್ ಎನ್‌ಟಿಆರ್, ಅಲ್ಲು ಅರ್ಜುನ್, ಮಹೇಶ್‌ಬಾಬು ಅವರು ಆಂಧ್ರಪ್ರದೇಶ ಮತ್ತು ತೆಲಂಗಾಣ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ತಲಾ ₹50 ಲಕ್ಷ ದೇಣಿಗೆ ನೀಡಿದ್ದಾರೆ.
ಇತ್ತ ಪವನ್ ಕಲ್ಯಾಣ್ ಅವರು ಆಂಧ್ರಪ್ರದೇಶ ಮತ್ತು ತೆಲಂಗಾಣ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ವೈಯಕ್ತಿಕವಾಗಿ ₹1 ಕೋಟಿ ದೇಣಿಗೆ ನೀಡುವುದಾಗಿ ಘೋಷಿಸಿದ್ದರು. ಜತೆಗೆ ಆಂಧ್ರಪ್ರದೇಶದ 400 ಗ್ರಾಮ ಪಂಚಾಯಿತಿಗಳಿಗೆ ತಲಾ ₹1 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದರು. ಅದರಂತೆ ಪರಿಹಾರದ ಚೆಕ್‌ಗಳನ್ನು ಹಸ್ತಾಂತರಿಸಿದ್ದಾರೆ.
Hyderabad | Andhra Pradesh Dy CM Pawan Kalyan met Telangana CM Revanth Reddy at his residence in Jubilee Hills and donated Rs 1 crore to the Chief Minister's Relief Fund: Telangana CMO
— ANI (@ANI) September 11, 2024
(Pic source - Telangana CMO) pic.twitter.com/axPA3krgON
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.