ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ED ಅಧಿಕಾರಿಗಳ ಮೇಲೆ ದಾಳಿ: ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ವಿಪಕ್ಷಗಳ ಪಟ್ಟು

Published 5 ಜನವರಿ 2024, 11:44 IST
Last Updated 5 ಜನವರಿ 2024, 13:01 IST
ಅಕ್ಷರ ಗಾತ್ರ

ಕೋಲ್ಕತ್ತ: ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಉತ್ತರ 24 ಪರಗಣ ಜಿಲ್ಲೆಯಲ್ಲಿ ಶುಕ್ರವಾರ ನಡೆದ ದಾಳಿಯನ್ನು ಖಂಡಿಸಿರುವ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು, ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಪಟ್ಟು ಹಿಡಿದಿವೆ. 

ವಿರೋಧ ಪಕ್ಷಗಳ ಆಗ್ರಹಕ್ಕೆ ತಿರುಗೇಟು ನೀಡಿರುವ ಆಡಳಿತಾರೂಢ ಟಿಎಂಸಿ, ‘ED ಅಧಿಕಾರಿಗಳು ಸ್ಥಳೀಯರನ್ನು ಪ್ರಚೋದಿಸಿದ್ದರು’ ಎಂದು ಆರೋಪಿಸಿದೆ.

ಪಡಿತರ ವಿತರಣೆ ಹಗರಣಕ್ಕೆ ಸಂಬಂಧಿಸಿದಂತೆ ಟಿಎಂಸಿ ಮುಖಂಡ ಶೇಖ್ ಶಹಜಹಾನ್ ಮನೆಗೆ ತನಿಖೆಗೆ ತೆರಳುತ್ತಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿದ್ದ ಕಾರಿನ ಮೇಲೆ ಶೇಖ್ ಬೆಂಬಲಿಗರು ದಾಳಿ ನಡೆಸಿದ್ದಾರೆ. ಅಧಿಕಾರಿಗಳ ಮೇಲೆ ದಾಳಿ ನಡೆಸಿ, ವಾಹನ ಜಖಂಗೊಳಿಸಿದ್ದಾರೆ ಎಂದು ಹೇಳಲಾಗಿದೆ.

ಸಚಿವ ಜ್ಯೋತಿಪ್ರಿಯಾ ಮಲ್ಲಿಕ್ ಅವರ ಅನುಯಾಯಿ ಎಂದೆನ್ನಲಾದ ಶಹಜಹಾನ್‌ ಅವರನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿತ್ತು. ದಾಳಿಯಲ್ಲಿ ಜಾರಿ ನಿರ್ದೇಶನಾಲಯದ ಇಬ್ಬರು ಅಧಿಕಾರಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿಶಿತ್ ಪ್ರಮಾಣಿಕ್, ‘ಕೇಂದ್ರ ತನಿಖಾ ತಂಡದ ಅಧಿಕಾರಿಗಳಿಗೆ ಸೂಕ್ತ ಭದ್ರತೆ ಮತ್ತು ಮೂಲಸೌಕರ್ಯ ಒದಗಿಸುವುದು ರಾಜ್ಯ ಸರ್ಕಾರದ ಜವಾಬ್ದಾರಿ. ಆದರೆ ಪಶ್ಚಿಮ ಬಂಗಾಳದಲ್ಲಿ ಅದು ಆಗುತ್ತಿಲ್ಲ. ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮೇಲಿನ ದಾಳಿ ಒಕ್ಕೂಟ ವ್ಯವಸ್ಥೆ ಮೇಲಾಗಿರುವ ಹಲ್ಲೆ’ ಎಂದು ಆರೋಪಿಸಿದ್ದಾರೆ.

‘ಈ ಘಟನೆಯನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪಶ್ಚಿಮ ಬಂಗಾಳದಲ್ಲೇ ಏಕೆ ಇಂಥ ಘಟನೆಗಳು ಮರುಕಳಿಸುತ್ತಿವೆ ಎಂಬುದನ್ನೂ ಸೂಕ್ಷ್ಮವಾಗಿ ಗಮನಿಸಲಾಗುವುದು’ ಎಂದಿದ್ದಾರೆ.

ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಸುಕಾಂತಾ ಮಜುಂದಾರ ಅವರು ಘಟನೆ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು, ರಾಷ್ಟ್ರೀಯ ತನಿಖಾ ದಳ (NIA)ದ ಮೂಲಕ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ. ಜತೆಗೆ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಒತ್ತಾಯಿಸಿದ್ದಾರೆ.

ಕಾಂಗ್ರೆಸ್‌ ರಾಜ್ಯ ಘಟಕದ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಪ್ರತಿಕ್ರಿಯಿಸಿ, ‘ರಾಜ್ಯದಲ್ಲಿ ಟಿಎಂಸಿ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಇದೆಯೇ ಎಂಬುದೇ ಅರ್ಥವಾಗುತ್ತಿಲ್ಲ‘ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಜತೆಗೆ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ತರುವಂತೆ ಒತ್ತಾಯಿಸಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಸಚಿವ ಶಶಿ ಪಂಜಾ, ‘ED ಅಧಿಕಾರಿಗಳು ಸ್ಥಳೀಯರನ್ನು ಪ್ರಚೋದಿಸಿದ್ದೇ ಘಟನೆಗೆ ಕಾರಣ’ ಎಂದಿದ್ದಾರೆ. 

ಬಿಜೆಪಿ ಮತ್ತು ಕಾಂಗ್ರೆಸ್ ಆರೋಪಗಳಿಗೆ ತಿರುಗೇಟು ನೀಡಿರುವ ಪಕ್ಷದ ವಕ್ತಾರ ಕುನಾಲ್ ಘೋಷ್‌, ‘ಇತರ ರಾಜ್ಯಗಳಿಗೆ ಹೋಲಿಸಿದರೆ ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT