ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನೀರಿನ ಬಿಕ್ಕಟ್ಟು | ಹರಿಯಾಣ ಸಿಎಂಗೆ ಪತ್ರ ಬರೆದ ಅತಿಶಿ: ನಾಟಕ ಎಂದು ಕಾಲೆಳೆದ BJP

Published 3 ಜೂನ್ 2024, 6:11 IST
Last Updated 3 ಜೂನ್ 2024, 6:11 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನೀರಿನ ಬಿಕ್ಕಟ್ಟು ತೀವ್ರವಾಗಿದ್ದು, ಒಂದು ತಿಂಗಳ ಅವಧಿಗೆ ಹೆಚ್ಚುವರಿ ನೀರು ಬಿಡುಗಡೆ ಮಾಡುವಂತೆ ಕೋರಿ ದೆಹಲಿಯ ಜಲ ಸಚಿವೆ ಆತಿಶಿ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹಾಗೂ ಹರಿಯಾಣ ಮುಖ್ಯಮಂತ್ರಿ ನಾಯಬ್ ಸಿಂಗ್‌ ಸೈನಿ ಅವರಿಗೆ ಪತ್ರ ಬರೆದಿರುವುದನ್ನು ಬಿಜೆಪಿ ಟೀಕಿಸಿದೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ದೆಹಲಿ ಬಿಜೆಪಿ ಘಟಕದ ಅಧ್ಯಕ್ಷ ವೀರೇಂದ್ರ ಸಚ್‌ದೇವ, ‘ಅತಿಶಿ ಅವರು ನೀರಿನ ಸಮಸ್ಯೆಯ ಹೆಸರಿನಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಹರಿಯಾಣ ಮತ್ತು ಉತ್ತರಾಖಂಡ ರಾಜ್ಯಗಳು ಪ್ರತಿನಿತ್ಯ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡುತ್ತಿರುವುದರಿಂದ ದೆಹಲಿಯಲ್ಲಿ ನೀರಿನ ಕೊರತೆ ಎದುರಾಗಿಲ್ಲ. ಅಗತ್ಯವಿದ್ದರೆ ದೆಹಲಿ ಜಲ ಮಂಡಳಿಯ ದಾಖಲೆಗಳನ್ನು ಪರಿಶೀಲಿಸಬಹುದು ಎಂದು ಹೇಳಿದ್ದಾರೆ.

‘ಎಎಪಿ ನಾಯಕರು ಬಿಜೆಪಿ ಆಡಳಿತವಿರುವ ಹರಿಯಾಣ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿಗಳಿಗೆ ರಾಜಕೀಯ ಪ್ರೇರಿತ ಪತ್ರಗಳನ್ನು ಬರೆಯುವುದನ್ನು ನಿಲ್ಲಿಸಬೇಕು. ನೀರು ಮಿತವಾಗಿ ಬಳಸುವ ಬಗ್ಗೆ ಸಾರ್ವಜನಿಕರಿಗೆ ಮನವಿ ಮಾಡಬೇಕು. ಜತೆಗೆ ಅನಧಿಕೃತ ಸಂಪರ್ಕವನ್ನು ನಿಲ್ಲಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಬೇಕು’ ಎಂದು ಸಚ್‌ದೇವ ಗುಡುಗಿದ್ದಾರೆ.

ದೆಹಲಿಯಲ್ಲಿ ಈ ವರ್ಷ ಬಿಸಿಲಿನ ತಾಪದ (50 ಡಿಗ್ರಿ ಸೆಲ್ಸಿಯಸ್‌) ಜತೆಗೆ ನೀರಿನ ಬಿಕ್ಕಟ್ಟು ಎದುರಾಗಿದ್ದು, ಹಿಂದಿನ ವರ್ಷಗಳಿಗೆ ಹೋಲಿಸಿದರೆ ನೀರಿನ ಬೇಡಿಕೆ ಗಣನೀಯವಾಗಿ ಹೆಚ್ಚಿದೆ. ನೀರಿನ ಸಮಸ್ಯೆ ಬಗೆಹರಿಸುವ ಸಲುವಾಗಿ ತುರ್ತಾಗಿ ಯಮುನಾ ನದಿಗೆ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡುವ ಅಗತ್ಯವಿದೆ. ಜತೆಗೆ ವಜೀರಾಬಾದ್ ಬ್ಯಾರೇಜ್‌ನಲ್ಲಿ ನೀರಿನ ಮಟ್ಟ ಕುಸಿದಿದೆ ಎಂದು ಹರಿಯಾಣ ಸಿಎಂಗೆ ಬರೆದ ಪತ್ರದಲ್ಲಿ ಅತಿಶಿ ಉಲ್ಲೇಖಿಸಿದ್ದರು.

ಇದೇ ವಿಚಾರವನ್ನು ಉಲ್ಲೇಖಿಸಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೂ ಮನವಿ ಮಾಡಿದ್ದ ಅತಿಶಿ, ನೀರಿನ ಸಮಸ್ಯೆ ಬಗೆಹರಿಸಲು ಎಲ್ಲರ ನೆರವು ಅಗತ್ಯವಿದೆ. ದೆಹಲಿ ಸರ್ಕಾರ ಮತ್ತು ರಾಷ್ಟ್ರ ರಾಜಧಾನಿಯಲ್ಲಿ ವಾಸಿಸುತ್ತಿರುವ ಜನರು ಸಕಾರಾತ್ಮಕ ಪ್ರತಿಕ್ರಿಯೆಗಾಗಿ ಕಾತರದಿಂದ ಕಾಯುತ್ತಿದ್ದಾರೆ ಎಂದು ವಿವರಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT