ಕೋಲ್ಕತ್ತ: ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ನ್ಯಾಯಕ್ಕಾಗಿ ಒತ್ತಾಯಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ನೇತೃತ್ವದ ಸರ್ಕಾರವು ಬಲಪ್ರಯೋಗ ನಡೆಸಿದೆ ಎಂದು ರಾಜ್ಯಪಾಲ ಸಿ.ವಿ. ಆನಂದ ಬೋಸ್ ಆರೋಪಿಸಿದ್ದಾರೆ. ಅಲ್ಲದೆ, ರಾಷ್ಟ್ರ ಧ್ವಜವನ್ನು ಅವಮಾನಿಸಿದೆ ಎಂದು ದೂರಿದ್ದಾರೆ.
ಪರಿಸ್ಥಿತಿಯನ್ನು ನಾನು ನಿಕಟವಾಗಿ ಗಮನಿಸುತ್ತಿದ್ದೇನೆ. ಸಾಮಾನ್ಯ ಸ್ಥಿತಿಗಿಂತ ಸಂಪೂರ್ಣ ಭಿನ್ನವಾಗಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ(ಪಶ್ಚಿಮ ಬಂಗಾಳ) ರಾಷ್ಟ್ರಪತಿ ಆಳ್ವಿಕೆ ಹೇರಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ವಿಪಕ್ಷ ನಾಯಕ ಸುವೇಂದು ಅಧಿಕಾರಿ ಒತ್ತಾಯಿಸಿದ ಬೆನ್ನಲ್ಲೇ ರಾಜ್ಯಪಾಲರಿಂದ ಪ್ರತಿಕ್ರಿಯೆ ಬಂದಿದೆ.
‘ಸದ್ಯದ ಪರಿಸ್ಥಿತಿಯಲ್ಲಿ ಸಾರ್ವಜನಿಕವಾಗಿ ನಿರ್ಧಾರ ಕೈಗೊಳ್ಳುವುದು ನನಗೆ ಕಷ್ಟವಾಗುತ್ತಿದೆ. ಸರ್ಕಾರದ ಬೇಜವಾಬ್ದಾರಿ ನಡವಳಿಕೆಯಿಂದಾಗಿ ಸಾರ್ವಜನಿಕರ ಬದುಕು ಸವಾಲಾಗಿದೆ’ಎಂದು ರಾಜ್ಯಪಾಲರು ದೂರಿದ್ದಾರೆ.
ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಖಂಡಿಸಿ ಕೋಲ್ಕತ್ತದಲ್ಲಿ ನಡೆಯುತ್ತಿದ್ದ ಸರ್ಕಾರಿ ಕಾರ್ಯಾಲಯದ ಕಡೆಗಿನ ಪ್ರತಿಭಟನಾ ಮೆರವಣಿಗೆ ವೇಳೆ ಲಾಠಿ ಪ್ರಹಾರ, ಅಶ್ರುವಾಯು, ಜಲಫಿರಂಗಿ ಪ್ರಯೋಗವನ್ನು ಉಲ್ಲೇಖಿಸಿರುವ ರಾಜ್ಯಪಾಲರು, ಕೋಲ್ಕತ್ತದ ಬೀದಿಯಲ್ಲಿ ರಾಷ್ಟ್ರಧ್ವಜ, ರಾಷ್ಟ್ರೀಯ ಭಾವನೆ, ದೇಶ ಮತ್ತು ಪಶ್ಚಿಮ ಬಂಗಾಳದ ಜನರನ್ನು ಸರ್ಕಾರ ಅವಮಾನಿಸಿದೆ ಎಂದು ದೂರಿದ್ಧಾರೆ.
ಈ ಹಿಂದೆಯೂ ಹಲವು ವಿಷಯಗಳ ಕುರಿತಂತೆ ರಾಜ್ಯಪಾಲರು ಮತ್ತು ಸರ್ಕಾರದ ನಡುವೆ ಆರೋಪ–ಪ್ರತ್ಯಾರೋಪಗಳು ನಡೆದಿವೆ.