ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಲ್ಕಿಸ್ ಬಾನೊ ಪ್ರಕರಣ: ಜ. 8ರ ತೀರ್ಪು ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ

Published 2 ಮಾರ್ಚ್ 2024, 16:08 IST
Last Updated 2 ಮಾರ್ಚ್ 2024, 16:21 IST
ಅಕ್ಷರ ಗಾತ್ರ

ನವದೆಹಲಿ: ಬಿಲ್ಕಿಸ್ ಬಾನು ಪ್ರಕರಣದ 11 ಮಂದಿ ಅಪರಾಧಿಗಳಲ್ಲಿ ಇಬ್ಬರು, ಜನವರಿ 8 ರಂದು ನೀಡಿದ್ದ ತೀರ್ಪನ್ನು ವಿಸ್ತೃತ ಪೀಠಕ್ಕೆ ಒಪ್ಪಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ.

2002ರಲ್ಲಿ ಗೋಧ್ರಾ ರೈಲು ದುರಂತದ ಬಳಿಕ ಗುಜರಾತ್‌ನಲ್ಲಿ ನಡೆದಿದ್ದ ಹಿಂಸಾಚಾರದ ವೇಳೆ ಸುರಕ್ಷಿತ ಜಾಗಕ್ಕೆ ತೆರಳುತ್ತಿದ್ದ ಬಿಲ್ಕಿಸ್‌ ಬಾನು ಅವರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ಅವರ ಮೂರು ವರ್ಷದ ಮಗಳೂ ಸೇರಿದಂತೆ, ಕುಟುಂಬದ 7 ಮಂದಿಯನ್ನು ಹತ್ಯೆ ಮಾಡಲಾಗಿತ್ತು. ಆಗ 21 ವರ್ಷದವರಾಗಿದ್ದ ಬಾನು, ಐದು ತಿಂಗಳ ಗರ್ಭಿಣಿಯೂ ಆಗಿದ್ದರು.

ಇದರಲ್ಲಿ ಬಕಾಭಾಯಿ ವೋಹಾನಿಯಾ, ಬಿಪಿನ್ ಚಂದ್ರ ಜೋಶಿ, ಕೇಸರಭಾಯಿ ವೋಹಾನಿಯಾ, ಗೋವಿಂದ್ ನಾಯ್, ಜಸ್ವಂತ್ ನಾಯ್, ಮಿತೇಶ್ ಭಟ್, ಪ್ರದೀಪ್ ಮೋರ್ಧಿಯಾ, ರಾಧೇಶ್ಯಾಮ್ ಶಾ, ರಾಜುಭಾಯ್ ಸೋನಿ, ರಮೇಶ್ ಚಂದನಾ ಮತ್ತು ಶೈಲೇಶ್ ಭಟ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಇವರ ಮೇಲಿನ ಆರೋಪ ಸಾಭೀತಾಗಿದ್ದರಿಂದ 2008ರಲ್ಲಿ ಇವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಆದರೆ, ಗುಜರಾತ್ ಸರ್ಕಾರದ ಆದೇಶದ ಮೇರೆಗೆ ಎಲ್ಲ ಅಪರಾಧಿಗಳು 2022ರ ಆಗಸ್ಟ್‌ 15ರಂದು ಜೈಲಿನಿಂದ ಬಿಡುಗಡೆಯಾಗಿದ್ದರು.

ಇದನ್ನು ಪ್ರಶ್ನಿಸಿ ಬಿಲ್ಕಿಸ್ ಬಾನೊ ಅವರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ಪೀಠವು, ಈ ವಿಷಯವನ್ನು ನಿರ್ಧರಿಸಬೇಕಿರುವುದು ಆಗ ಪ್ರಕರಣ ದಾಖಲಿಸಿದ ಮಹಾರಾಷ್ಟ್ರ ಸರ್ಕಾರವೇ ಹೊರತು, ಗುಜರಾತ್‌ ಅಲ್ಲ ಎಂದು ಹೇಳಿತ್ತು. ಜತೆಗೆ ಅಪರಾಧಿಗಳಿಗೆ ಕ್ಷಮಾದಾನ ನೀಡುವ ಪ್ರಕ್ರಿಯೆಯಲ್ಲಿ ಗುಜರಾತ್ ಸರ್ಕಾರವು ತನ್ನ ವಿವೇಚನಾ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿದೆ ಎಂದು ಹೇಳಿ, ಅಪರಾಧಿಗಳು ಮುಂದಿನ 2 ವಾರದೊಳಗೆ ಜೈಲಿಗೆ ಹಿಂದಿರುಗಬೇಕು ಎಂದು ಜ. 8ರಂದು ಆದೇಶಿಸಿತ್ತು.

ಸುಪ್ರೀಂ ಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ ರಾಧೇಶ್ಯಾಮ್ ಭಗವಾನದಾಸ ಶಾ ಮತ್ತು ರಾಜುಭಾಯ್ ಬಾಬುಲಾಲ್ ಸೋನಿ ಮೇಲ್ಮನವಿ ಸಲ್ಲಿಸಿದ್ದಾರೆ. ‘ಕ್ಷಮಾದಾನ ರದ್ದುಪಡಿಸಿರುವ ತೀರ್ಪು, 2002ರ ಸಂವಿಧಾನ ಪೀಠ ನೀಡಿದ್ದ ಆದೇಶಕ್ಕೆ ವ್ಯತಿರಿಕ್ತವಾಗಿದೆ. ಆದ್ದರಿಂದ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ಒಪ್ಪಿಸಬೇಕು’ ಎಂದು ಮೇಲ್ಮನವಿ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT