ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಲ್ಕಿಸ್ ಬಾನೊ ಅತ್ಯಾಚಾರ ಅಪರಾಧಿಗಳ ಬಿಡುಗಡೆ: ದಾಖಲೆ ಕೇಳಿದ ಸುಪ್ರೀಂ ಕೋರ್ಟ್

Published : 12 ಅಕ್ಟೋಬರ್ 2023, 12:50 IST
Last Updated : 12 ಅಕ್ಟೋಬರ್ 2023, 12:50 IST
ಫಾಲೋ ಮಾಡಿ
Comments

ನವದೆಹಲಿ: ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪರಾಧಿಗಳ ಅವಧಿಪೂರ್ವ ಬಿಡುಗಡೆ ಹಾಗೂ ಆಕೆಯ ಕುಟುಂಬದ ಏಳು ಸದಸ್ಯರ ಹತ್ಯೆಗೆ ಸಂಬಂಧಿಸಿದ ಮೂಲ ದಾಖಲೆಗಳನ್ನು ಅಕ್ಟೋಬರ್ 16 ರೊಳಗೆ ಸಲ್ಲಿಸುವಂತೆ ಕೇಂದ್ರ ಮತ್ತು ಗುಜರಾತ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಇಂದು (ಗುರುವಾರ) ಸೂಚಿಸಿದೆ.

ಅತ್ಯಾಚಾರ ಪ್ರಕರಣದ 11 ಅಪರಾಧಿಗಳನ್ನು ಶಿಕ್ಷೆಯ ಅವಧಿ ಪೂರ್ಣಗೊಳ್ಳುವ ಮೊದಲೇ ಬಿಡುಗಡೆ ಮಾಡಿರುವ ಗುಜರಾತ್ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (ಪಿಐಎಲ್‌) ವಿಚಾರಣೆ ನಡೆಸಿದ ನ್ಯಾ. ಬಿ.ವಿ. ನಾಗರತ್ನ ಹಾಗೂ ನ್ಯಾ. ಉಜ್ಜಲ್ ಭುಯಾನ್ ಅವರಿದ್ದ ವಿಭಾಗೀಯ ಪೀಠ, ಆದೇಶವನ್ನು ಕಾಯ್ದಿರಿಸಿದೆ.

ಸರ್ಕಾರದ ಕ್ರಮವನ್ನು ವಿರೋಧಿಸಿ ಬಿಲ್ಕಿಸ್ ಬಾನೊ ಮಾತ್ರವಲ್ಲದೆ, ಸಿಪಿಐ(ಎಂ) ನಾಯಕಿ ಸುಭಾಷಿಣಿ ಅಲಿ, ಪತ್ರಕರ್ತೆ ರೇವತಿ ಲಾಲ್ ಮತ್ತು ಲಕ್ನೋ ವಿಶ್ವವಿದ್ಯಾಲಯದ ವಿಶ್ರಾಂತ ಉಪಕುಲಪತಿ ರೂಪ್ ರೇಖಾ ವರ್ಮಾ ಸೇರಿದಂತೆ ಹಲವರು ಪಿಐಎಲ್‌ ಸಲ್ಲಿಸಿದ್ದಾರೆ.

ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರೂ ಅಪರಾಧಿಗಳಿಗೆ ನೀಡಲಾದ ವಿನಾಯಿತಿ ಮತ್ತು ಅವರ ಅವಧಿಪೂರ್ವ ಬಿಡುಗಡೆಯನ್ನು ಪ್ರಶ್ನಿಸಿ ಪಿಐಎಲ್‌ ಸಲ್ಲಿಸಿದ್ದಾರೆ.

2002ರಲ್ಲಿ ಸಂಭವಿಸಿದ ಗೋದ್ರಾ ರೈಲು ದುರಂತದ ಬಳಿಕ ಗುಜರಾತ್‌ನಲ್ಲಿ ಭುಗಿಲೆದ್ದ ಕೋಮುಗಲಭೆಯಿಂದ ತಪ್ಪಿಸಿಕೊಳ್ಳಲು ಪಲಾಯನ ಮಾಡುತ್ತಿದ್ದ ಬಿಲ್ಕಿಸ್‌ ಬಾನೊ ಅವರ ಕುಟುಂಬದ ಮೇಲೆ ದಾಳಿ ನಡೆದಿತ್ತು. ಆ ಸಮಯದಲ್ಲಿ ಐದು ತಿಂಗಳ ಗರ್ಭಿಣಿಯಾಗಿದ್ದ ಬಿಲ್ಕಿಸ್ ಬಾನೊ ಅವರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿತ್ತು. ಜೊತೆಗೆ ಬಾನೊ ಕುಟುಂಬದ ಏಳು ಜನರನ್ನು ಹತ್ಯೆ ಮಾಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT