ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾರಕ್‌ಪುರ: ಬಿಜೆಪಿ–ಪೊಲೀಸರ ನಡುವೆ ಸಂಘರ್ಷ

Published 29 ಜನವರಿ 2024, 16:15 IST
Last Updated 29 ಜನವರಿ 2024, 16:15 IST
ಅಕ್ಷರ ಗಾತ್ರ

ಕೋಲ್ಕತ್ತ: ಬಿಜೆಪಿ ಕಾರ್ಯಕರ್ತರ ಪ್ರತಿಭಟನಾ ಮೆರವಣಿಗೆಯನ್ನು ಪೊಲೀಸರು ತಡೆದ ಪರಿಣಾಮ, ವಾಗ್ವಾದ ಜೋರಾಗಿ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಜಲಫಿರಂಗಿ, ಅಶ್ರುವಾಯು ಶೆಲ್‌ ಸಿಡಿಸಿದ ಘಟನೆ ಸೋಮವಾರ ಇಲ್ಲಿನ ಬ್ಯಾರಕ್‌ಪುರದಲ್ಲಿ ನಡೆಯಿತು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿ ಬ್ಯಾರಕ್‌ಪುರ ಪೊಲೀಸ್‌ ಆಯುಕ್ತರ ಕಚೇರಿಯತ್ತ ಪ್ರತಿಭಟನಾ ಮೆರವಣಿಗೆಯಲ್ಲಿ ಸಾಗುತ್ತಿದ್ದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಅಡ್ಡಗಟ್ಟಿ ತಡೆದರು. ಆ ವೇಳೆ ಪ್ರತಿಭಟನಕಾರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಕ್ರಮೇಣ ಪರಿಸ್ಥಿತಿ ವಿಕೋಪಕ್ಕೆ ತಿರುಗಿತು.

‘ಜೈ ಶ್ರೀರಾಮ್‌’, ‘ಭಾರತ್‌ ಮಾತಾ ಕಿ ಜೈ’ ಎಂದು ಘೋಷಣೆಗಳನ್ನು ಕೂಗುತ್ತಾ ಮುನ್ನುಗ್ಗಿದ ಪ್ರತಿಭಟನಕಾರರು ಪೊಲೀಸರ ಬ್ಯಾರಿಕೇಡ್‌ಗಳನ್ನು ಕಿತ್ತೆಸೆದು ಮುಂದೆ ಸಾಗಿದರು. ಪರಿಸ್ಥಿತಿ ಕೈ ಮೀರದಂತೆ ನೋಡಿಕೊಳ್ಳಲು ಮತ್ತು ಗುಂಪನ್ನು ಚದುರಿಸಲು ಪೊಲೀಸರು ಜಲಫಿರಂಗಿ ಬಳಸಿದರು.

ಈ ವೇಳೆ ಪ್ರತಿಭಟನಕಾರರು ಪೊಲೀಸರ ವಿರುದ್ಧ ಕಲ್ಲು ತೂರಾಟ ನಡೆಸಿದಾಗ, ಪ್ರತಿಯಾಗಿ ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಸಿಡಿಸಿದರು ಎಂದು ಅಧಿಕಾರಿಗಳು ತಿಳಿಸಿದರು. 

ಪೊಲೀಸರು ನಡೆಸಿದ ದಾಳಿಯಿಂದ ಪಕ್ಷದ ಹಲವು ಕಾರ್ಯಕರ್ತರು ಗಾಯಗೊಂಡಿದ್ದಾರೆ ಎಂದು ಬಿಜೆಪಿ ಆರೋಪಿಸಿದರೆ, ಕಾನೂನು ಸುವ್ಯವಸ್ಥೆ ಕಾಪಾಡಲು ಮತ್ತು ಪರಿಸ್ಥಿತಿ ನಿಯಂತ್ರಿಸಲು ಅಗತ್ಯವಿದ್ದ ಕ್ರಮಗಳನ್ನು ತೆಗೆದುಕೊಳ್ಳಲಾಯಿತು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮೇಲೆ ಟಿಎಂಸಿ ನಾಯಕರು, ಬೆಂಬಲಿಗರು ಮಾಡಿದ ದಾಳಿಯನ್ನು ತಡೆಯಲಾಗದ ಪೊಲೀಸರು, ಶಾಂತಿಯುತವಾಗಿ ಸಾಗಿದ್ದ ಪ್ರತಿಭಟನಕಾರರ ಮೇಲೆ ದೌರ್ಜನ್ಯ ಎಸಗಿದ್ದಾರೆ. ಮಹಿಳಾ ಕಾರ್ಯಕರ್ತರ ಮೇಲೆ ದೈಹಿಕವಾಗಿ ಹಲ್ಲೆ ಮಾಡಿದ್ದಾರೆ’ ಎಂದು ಪ್ರತಿಭಟನಾ ಮೆರವಣಿಗೆಯ ನೇತೃತ್ವ ವಹಿಸಿದ್ದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸುಕಾಂತ ಮಜುಂದಾರ್‌ ಆರೋಪಿಸಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT