ಸೋಮವಾರ, 11 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಬಿಸಿ ನಾಯಕರೊಂದಿಗೆ ಬಿಜೆಪಿ ವರಿಷ್ಠರ ಸಮಾಲೋಚನೆ

Published 2 ನವೆಂಬರ್ 2023, 16:40 IST
Last Updated 2 ನವೆಂಬರ್ 2023, 16:40 IST
ಅಕ್ಷರ ಗಾತ್ರ

ನವದೆಹಲಿ: ಬಿಜೆಪಿಯ ವಿವಿಧ ರಾಜ್ಯಗಳ ಇತರ ಹಿಂದುಳಿದ ವರ್ಗಗಳ (ಒಬಿಸಿ) ಸುಮಾರು 40 ನಾಯಕರ ಜತೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಗುರುವಾರ ಸಮಾಲೋಚನೆ ನಡೆಸಿದರು. 

ಇಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಕೇಂದ್ರ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಮತ್ತಿತರರು ಭಾಗವಹಿಸಿದ್ದರು. ಕರ್ನಾಟಕದ ಪ್ರತಿನಿಧಿಗಳಾಗಿ ಬಿಜೆಪಿ ಮುಖಂಡ ಕೆ.ಎಸ್‌.ಈಶ್ವರಪ್ಪ, ಸಂಸದ ಪಿ.ಸಿ.ಮೋಹನ್‌, ವಿಧಾನ ಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಪಾಲ್ಗೊಂಡಿದ್ದರು. 

ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಕೇಂದ್ರ ಬಿಜೆಪಿ ಸರ್ಕಾರ ಕೈಗೊಂಡ ಕ್ರಮಗಳು, ಮುಂದಿನ ದಿನಗಳಲ್ಲಿ ಯಾವೆಲ್ಲ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಬೇಕು ಎಂಬ ವಿಷಯದ ಬಗ್ಗೆ ಚರ್ಚಿಸಲಾಯಿತು. ಜಾತಿ ಜನಗಣತಿ, ಮೀಸಲಾತಿ ಬಗ್ಗೆಯೂ ರಾಜ್ಯಗಳ ಮುಖಂಡರಿಂದ ವರಿಷ್ಠರು ಮಾಹಿತಿ ಪಡೆದರು. ಹಿಂದುಳಿದ ವರ್ಗಗಳ ಆಯೋಗಗಳ ವರದಿಗಳ ಕುರಿತು ಸಮಾಲೋಚಿಸಿದರು ಎಂದು ಮೂಲಗಳು ತಿಳಿಸಿವೆ. 

‘ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿ ಗಣತಿ ನಡೆಸಲು ₹170 ಕೋಟಿ ಖರ್ಚು  ಮಾಡಿದ್ದಾರೆ. ವರದಿ ಸಿದ್ಧವಾಗಿ ಏಳು ವರ್ಷ ಕಳೆದರೂ ಅದನ್ನು ಸ್ವೀಕಾರ ಮಾಡಿಲ್ಲ. ನವೆಂಬರ್‌ನಲ್ಲಿ ವರದಿ ಪಡೆಯುವುದಾಗಿ ಇದೀಗ ಹೇಳುತ್ತಿದ್ದಾರೆ. ವರದಿ ಸ್ವೀಕರಿಸದಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಒತ್ತಡ ಹೇರುತ್ತಿದ್ದಾರೆ. ಸಿದ್ದರಾಮಯ್ಯ–ಶಿವಕುಮಾರ್‌ ‘ಮೈತ್ರಿ’ ಸರ್ಕಾರದಲ್ಲಿ ಉಂಟಾಗಿರುವ ಗೊಂದಲಗಳ ಬಗ್ಗೆ ವರಿಷ್ಠರಿಗೆ ಸಮಗ್ರವಾಗಿ ಮಾಹಿತಿ ನೀಡಲಾಯಿತು’ ಎಂದು ಮುಖಂಡರೊಬ್ಬರು ತಿಳಿಸಿದರು. 

ಬರ ಪರಿಹಾರಕ್ಕೆ ಮನವಿ: ‘ರಾಜ್ಯದಲ್ಲಿ ತೀವ್ರ ಬರಗಾಲದಿಂದ ಜನರು ಮತ್ತು ಕೃಷಿಕರು ಕಂಗೆಟ್ಟಿದ್ದಾರೆ. ಇಷ್ಟಾದರೂ ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಬರ ಪರಿಹಾರ ನೀಡುವುದರಲ್ಲಿ ವಿಫಲವಾಗಿದೆ. ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಬರ ಪರಿಹಾರ ಮೊತ್ತವನ್ನು ಬಿಡುಗಡೆ ಮಾಡಬೇಕೆಂದು ಅಮಿತ್‌ ಶಾ ಹಾಗೂ ಜೆ.ಪಿ.ನಡ್ಡಾ ಅವರಲ್ಲಿ ರಾಜ್ಯದ ಮುಖಂಡರು ಮನವಿ ಮಾಡಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT