ಜೈಪುರ: ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಪ್ರತಿಪಕ್ಷ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ಅವರು ಮುಖವನ್ನು ಏಕೆ ತೋರಿಸುತ್ತಿಲ್ಲ. ಇತ್ತೀಚೆಗೆ ನಡೆದ ಬಿಜೆಪಿ ಪ್ರತಿಭಟನಾ ರ‍್ಯಾಲಿಯಲ್ಲಿ ಏಕೆ ಭಾಗವಹಿಸಲಿಲ್ಲ’ ಎಂದು ಪ್ರಶ್ನಿಸಿದ್ದಾರೆ.
‘ಸಿಎಂ ಮುಖವು (ವಸುಂಧರಾ ರಾಜೆ) ಮನೆಯಲ್ಲಿ ಕುಳಿತಿದೆ. ಆಕೆಯನ್ನು ಮನೆಯಲ್ಲಿಯೇ ಕುಳಿತುಕೊಳ್ಳುವಂತೆ ಮಾಡಿರಬೇಕು’ ಎಂದು ಗೆಹಲೋತ್ ವ್ಯಂಗ್ಯವಾಡಿದ್ದಾರೆ.
ಮುಖ್ಯಮಂತ್ರಿ ರೇಸ್‌ನಲ್ಲಿರುವ ರಾಜಸ್ಥಾನ ಬಿಜೆಪಿ ನಾಯಕರು ಚುನಾಚಣೆಯಲ್ಲಿ ಗೆಲ್ಲುವ ಸಾಮರ್ಥ್ಯ ಹೊಂದಿಲ್ಲ. ಹಾಗಾಗಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮುಖವನ್ನು ಪ್ರದರ್ಶಿಸಲು ಯೋಜಿಸಿದ್ದಾರೆ ಎಂದು ಗೆಹಲೋತ್ ಕಿಡಿಕಾರಿದ್ದಾರೆ.
‘ಮೋದಿ ಅಂತರರಾಷ್ಟ್ರೀಯ ನಾಯಕರಾಗಿದ್ದು, ‘ವಿಶ್ವ ಗುರು’... ಅವರನ್ನು ರಾಜ್ಯ ವಿಧಾನಸಭೆ ಚುನಾವಣೆಗೆ ಏಕೆ ಕರೆತರುತ್ತಿದ್ದೀರಿ’ ಎಂದು ಪ್ರಶ್ನಿಸಿದರು.
2020ರ ರಾಜಕೀಯ ಬಿಕ್ಕಟ್ಟಿನ ಸಂದರ್ಭದಲ್ಲಿ ವಸುಂಧರಾ ನಮ್ಮ ಸರ್ಕಾರವನ್ನು ಉಳಿಸಿದ್ದಾರೆ ಎಂದು ಅವರ ಮೇಲೆ ಆರೋಪಿಸಲಾಗಿದೆ. ಆದರೆ, ಅವರು ನಮ್ಮ ಸರ್ಕಾರವನ್ನು ಉಳಿಸಲಿಲ್ಲ. ರಾಜ್ಯದಲ್ಲಿ ಕುದುರೆ ವ್ಯಾಪಾರದ ಮೂಲಕ ಸರ್ಕಾರವನ್ನು ಉರುಳಿಸುವ ಸಂಪ್ರದಾಯವಿಲ್ಲ ಎಂದು ಹೇಳಿದರು.
ರಾಜಸ್ಥಾನ ವಿಧಾನಸಭೆ ಚುನಾವಣೆ ವರ್ಷಾಂತ್ಯಕ್ಕೆ ನಡೆಯಲಿದ್ದು, ಆಡಳಿತಾರೂಢ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಚುನಾವಣೆಗೆ ಸಜ್ಜಾಗುತ್ತಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.