ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ ರಾಜೀನಾಮೆಗೆ ಆಗ್ರಹ: ಬಿಜೆಪಿ ಪ್ರತಿಭಟನೆ

Published 26 ಮಾರ್ಚ್ 2024, 8:51 IST
Last Updated 26 ಮಾರ್ಚ್ 2024, 8:51 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಅಬಕಾರಿ ನೀತಿ ಸಂಬಂಧಿತ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ ರಾಜೀನಾಮೆಗೆ ಒತ್ತಾಯಿಸಿ ದೆಹಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟಿಸಿದ್ದಾರೆ.

ನಗರದ ಫಿರೋಜ್‌ಶಾ ಕೋಟ್ಲಾ ಕ್ರೀಡಾಂಗಣದ ಬಳಿ ಜಮಾಯಿಸಿದ್ದ ಬಿಜೆಪಿ ಮುಖಂಡರು ಆಮ್‌ ಆದ್ಮಿ ಪಕ್ಷದ (ಎಎಪಿ) ವಿರುದ್ಧ ಘೋಷಣೆಗಳನ್ನು ಕೂಗುತ್ತ ದೆಹಲಿ ಸೆಕ್ರೆಟರಿಯೇಟ್‌ ಕಡೆಗೆ ಸಾಗಿದರು.

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಕೇಜ್ರಿವಾಲ್‌ ಅವರನ್ನು ಬಂಧಿಸಲಾಗಿದೆ. ಆದ್ದರಿಂದ ಅವರು ನೈತಿಕ ಆಧಾರದ ಮೇಲೆ ರಾಜೀನಾಮೆ ನೀಡಬೇಕು ಮತ್ತು ತಮ್ಮ ಜವಾಬ್ದಾರಿಯನ್ನು ಬೇರೆಯವರಿಗೆ ನೀಡಬೇಕು ಎಂದು ಬಿಜೆಪಿ ಹಿರಿಯ ನಾಯಕ ಮತ್ತು ಸಂಸದ ಹರ್ಷವರ್ಧನ್‌ ಒತ್ತಾಯಿಸಿದ್ದಾರೆ.

ಜಾರಿ ನಿರ್ದೇಶನಾಲಯದ (ಇ.ಡಿ) ವಶದಲ್ಲಿರುವ ಕೇಜ್ರಿವಾಲ್‌ ಅವರು ತಮ್ಮ ಸಚಿವರಿಗೆ ನಿರ್ದೇಶನಗಳನ್ನು ನೀಡುತ್ತಿರುವುದರ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಮಂಜಿಂದರ್ ಸಿಂಗ್‌ ಸಿರ್ಸಾ, ಮುಖ್ಯಮಂತ್ರಿಯೊಬ್ಬರು ಬಂಧನದಲ್ಲಿರುವಾಗ ನಿರ್ದೇಶನಗಳನ್ನು ನೀಡಲು ಸಾಧ್ಯವಿಲ್ಲ. ಎಎಪಿ ನಾಟಕವನ್ನು ಸೃಷ್ಟಿಸುತ್ತಿದೆ. ಈ ಸಂಬಂಧ ಕಠಿಣ ಕ್ರಮ ಕೈಗೊಳ್ಳುವಂತೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ಅವರಿಗೆ ದೂರು ನೀಡಿರುವುದಾಗಿ ತಿಳಿಸಿದ್ದಾರೆ.

'ಎಲ್ಲ ಸರ್ಕಾರಿ ಆಸ್ಪತ್ರೆಗಳು ಮತ್ತು 'ಮೊಹಲ್ಲಾ' ಕ್ಲಿನಿಕ್‌ಗಳಲ್ಲಿ ಜನರಿಗೆ ಔಷಧಿ ಮತ್ತು ಪರೀಕ್ಷೆಗಳು ಲಭ್ಯವಾಗುವಂತೆ ನೋಡಿಕೊಳ್ಳಲು ಕೇಜ್ರಿವಾಲ್ ನಿರ್ದೇಶನ ನೀಡಿದ್ದಾರೆ' ಎಂದು ದೆಹಲಿಯ ಆರೋಗ್ಯ ಸಚಿವ ಸೌರಭ್ ಭಾರದ್ವಾಜ್ ತಿಳಿಸಿದ್ದಾರೆ.

ನಗರದ ಕೆಲವು ಪ್ರದೇಶಗಳಲ್ಲಿ ನೀರು ಮತ್ತು ಒಳಚರಂಡಿ ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸುವಂತೆ ಇ.ಡಿ ಕಸ್ಟಡಿಯಲ್ಲಿರುವ ಸಿಎಂ ಕೇಜ್ರಿವಾಲ್‌ ಅವರು ನಿರ್ದೇಶಿಸಿದ್ದಾರೆ ಎಂದು ಮಾರ್ಚ್‌ 24ರಂದು ಸಚಿವೆ ಅತಿಶಿ ಹೇಳಿದ್ದರು.

ದೆಹಲಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ ಕೇಜ್ರಿವಾಲ್‌ ಅವರನ್ನು ದೆಹಲಿ ಅಬಕಾರಿ ನೀತಿ ಹಗರಣದ ಜೊತೆ ನಂಟಿರುವ ಹಣ ಅಕ್ರಮ ವರ್ಗಾವಣೆ ಆರೋಪದಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಬಂಧಿಸಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT