ಶ್ರೀನಗರ: ಮುಂಬರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಹಿನ್ನೆಲೆಯಲ್ಲಿ ತನ್ನ ಪ್ರಚಾರದುದ್ದಕ್ಕೂ ಹಿಂದೂ ಸಮುದಾಯದಲ್ಲಿ ಭಯದ ವಾತಾವರಣ ಸೃಷ್ಟಿಸುವ ಪ್ರಯತ್ನದಲ್ಲಿ ಬಿಜೆಪಿ ತೊಡಗಿದೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಭಾನುವಾರ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಮತ್ತೆ ಭಯೋತ್ಪಾದನೆ ತಲೆದೋರುತ್ತದೆ ಎಂದು ಹೇಳುತ್ತಿರುವ ಬಿಜೆಪಿಯು ಜನರಲ್ಲಿ ಭಯದ ವಾತಾವರಣವನ್ನು ಸೃಷ್ಟಿಸಿದೆ. ಈ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಕಿಡಿಕಾರಿದ್ದಾರೆ.
‘ಹಿಂದೂ ಸಮುದಾಯದಲ್ಲಿ ಭಯ ಮೂಡಿಸುವ ಮೂಲಕ ಅವರೂ ಮತ ಹಾಕುತ್ತಾರೆ ಎಂದು ಬಿಜೆಪಿ ಭಾವಿಸಿದೆ ಅದು ಅವರ ತಪ್ಪು ಕಲ್ಪನೆಯಾಗಿದೆ. ಹಿಂದೂಗಳು ಬದಲಾಗಿದ್ದಾರೆ. ಬಿಜೆಪಿಗರು ಮೊದಲು ರಾಮನ ಹೆಸರಿನಲ್ಲಿ ಮತ ಕೇಳುತ್ತಿದ್ದರು. ಈಗ ಅವರಲ್ಲಿ ಭಯದ ವಾತಾವರಣ ಮೂಡಿಸಲು ಪ್ರಯತ್ನಿಸುತ್ತಿದ್ದಾರೆ’ ಎಂದು ಹೇಳಿದ್ದಾರೆ.
‘ಸಂವಿಧಾನದ 370ನೇ ವಿಧಿಯಡಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಹಿಂಪಡೆದಿದ್ದರಿಂದ ಭಯೋತ್ಪಾದನೆ ಕಡಿಮೆಯಾಗಿದೆಯೇ? ಇನ್ನೂ ಹೆಚ್ಚಾಗಿವೆ, ಇದಕ್ಕೆ ಅವರೇ ಜವಾಬ್ದಾರರು’ ಎಂದು ಅಬ್ದುಲ್ಲಾ ತಿಳಿಸಿದ್ದಾರೆ.
‘ನಾವು ಒಳನುಸುಳುಕೋರರಲ್ಲ, ನಾವು ಮಂಗಳಸೂತ್ರವನ್ನು ಕಸಿದುಕೊಳ್ಳುವುದಿಲ್ಲ. ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಮುಸ್ಲಿಮರು ಸಮಾನ ಕೊಡುಗೆಯನ್ನು ನೀಡಿದ್ದಾರೆ’ ಎಂದು ಅಬ್ದುಲ್ಲಾ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.