ನವದೆಹಲಿ: ಪ್ರವಾಹದಿಂದ ತತ್ತರಿಸಿರುವ ತ್ರಿಪುರಾಕ್ಕೆ ಸ್ಪಂದಿಸಿರುವ ಕೇಂದ್ರ ಸರ್ಕಾರವು ₹40 ಕೋಟಿ ಪರಿಹಾರ ಮಂಜೂರು ಮಾಡಿದೆ.
ಈ ಕುರಿತು ಮಾಹಿತಿ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, 'ಪ್ರವಾಹ ಪೀಡಿತ ತ್ರಿಪುರಾಕ್ಕೆ ₹40 ಕೋಟಿ ಬಿಡುಗಡೆ ಮಾಡಲು ಅನುಮೋದನೆ ನೀಡಲಾಗಿದೆ' ಎಂದು ತಿಳಿಸಿದ್ದಾರೆ.
'ಪ್ರವಾಹ ಪರಿಹಾರ ಹಾಗೂ ರಕ್ಷಣಾ ಕಾರ್ಯಾಚರಣೆಯಲ್ಲಿ ರಾಜ್ಯ ಸರ್ಕಾರಕ್ಕೆ ನೆರವು ನೀಡಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್) 11 ತಂಡಗಳು, ಸೇನೆಯ ಮೂರು ತುಕಡಿ ಮತ್ತು ಭಾರತೀಯ ವಾಯುಪಡೆಯ ನಾಲ್ಕು ಹೆಲಿಕಾಪ್ಟರ್‌ಗಳನ್ನು ನಿಯೋಜಿಸಲಾಗಿದೆ' ಎಂದು ಅವರು ತಿಳಿಸಿದ್ದಾರೆ.
'ತ್ರಿಪುರಾದಲ್ಲಿ ಪ್ರವಾಹ ಪರಿಸ್ಥಿತಿಯ ತೀವ್ರತೆ ಮನಗಂಡು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಸಂತ್ರಸ್ತರಿಗೆ ಪರಿಹಾರ ನೀಡಲು ರಾಜ್ಯ ವಿಪತ್ತು ಪರಿಹಾರ ನಿಧಿಯ (ಎಸ್‌ಡಿಆರ್‌ಎಫ್) ಕೇಂದ್ರದ ಪಾಲಿನಿಂದ ₹40 ಕೋಟಿ ಮುಂಗಡ ಪರಿಹಾರ ಮಂಜೂರು ಮಾಡಲಾಗಿದೆ' ಎಂದು ಅವರು ತಿಳಿಸಿದ್ದಾರೆ.
ತ್ರಿಪುರಾದ ಮುಖ್ಯಮಂತ್ರಿ ಮಾಣಿಕ್ ಸಹಾ ಅವರಿಗೂ ಕರೆ ಮಾಡಿರುವ ಅಮಿತ್ ಶಾ, ಪ್ರವಾಹ ಸ್ಥಿತಿಯ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.
ತ್ರಿಪುರಾದಲ್ಲಿ ಸುರಿದ ಭಾರಿ ಮಳೆ ಸಂಬಂಧಿತ ಅವಘಡಗಳಲ್ಲಿ ಈವರೆಗೆ 22 ಮಂದಿ ಮೃತಪಟ್ಟಿದ್ದು, ಇಬ್ಬರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರವಾಹದಿಂದಾಗಿ ರಾಜ್ಯದಲ್ಲಿ ಸುಮಾರು 17 ಲಕ್ಷ ಜನರು ಸಂಕಷ್ಟದಲ್ಲಿದ್ದಾರೆ. 450 ಪರಿಹಾರ ಶಿಬಿರಗಳಲ್ಲಿ 65,400 ಮಂದಿ ಆಶ್ರಯ ಪಡೆದಿದ್ದಾರೆ.