ನವದೆಹಲಿ: ವಿವಿಧ ಹೈಕೋರ್ಟ್‌ಗಳ ಮೂವರು ಮುಖ್ಯ ನ್ಯಾಯಮೂರ್ತಿಗಳನ್ನು ಭಾರತದ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲು ಕಾನೂನು ಮತ್ತು ನ್ಯಾಯ ಸಚಿವಾಲಯ ಅನುಮತಿ ನೀಡಿದೆ.
ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮ ಅವರನ್ನು ಒಳಗೊಂಡಂತೆ ರಾಜಸ್ಥಾನ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಆಗಸ್ಟಿನ್ ಜಾರ್ಜ್ ಮಸಿಹ್ ಮತ್ತು ಗುವಾಹಟಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.
ಇಂದು(ಗುರುವಾರ) ಸಂಜೆ ಅವರು ಸುಪ್ರೀಂ ಕೋರ್ಟ್ ಆವರಣದ ಸಭಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಈ ನೇಮಕಾತಿಯೊಂದಿಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆ 34ಕ್ಕೆ ಏರುವ ಮೂಲಕ ಪೂರ್ಣ ಪ್ರಮಾಣದಲ್ಲಿ ನ್ಯಾಯಮೂರ್ತಿಗಳ ನೇಮಕವಾದಂತಾಗುತ್ತದೆ.
'ಸುಪ್ರೀಂ ಕೋರ್ಟ್‌ನಲ್ಲಿ ಹೆಚ್ಚು ಪ್ರಕರಣಗಳು ಬಾಕಿ ಉಳಿದಿವೆ. ನಿರಂತರವಾಗಿ ಹೆಚ್ಚುತ್ತಿರುವ ಪ್ರಕರಣಗಳು ಮತ್ತು ಕೆಲಸದ ಹೊರೆಯ ದೃಷ್ಟಿಯಿಂದ ನ್ಯಾಯಾಧೀಶರ ಸಂಖ್ಯೆ ಹೆಚ್ಚಳವಾಗಬೇಕಿದೆ' ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿ.ಆರ್ ಗವಾಯಿ ಮತ್ತು ಸೂರ್ಯ ಕಾಂತ್ ಅವರನ್ನೊಳಗೊಂಡ ಕೊಲಿಜಿಯಂ ಕೇಂದ್ರಕ್ಕೆ ಶಿಫಾರಸ್ಸು ಮಾಡಿತ್ತು.
'48 ಗಂಟೆಗಳಲ್ಲಿ ಮೂವರು ನ್ಯಾಯಾಧೀಶರ ನೇಮಕ ವಿಷಯದಲ್ಲಿ ಸುಪ್ರೀಂ ಕೋರ್ಟ್ ಕೊಲಿಜಿಯಂನ ಶಿಫಾರಸನ್ನು ಅಂಗೀಕರಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದ' ಎಂದು ಹಿರಿಯ ವಕೀಲ ಮತ್ತು ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಶನ್‌ನ ಅಧ್ಯಕ್ಷ ಆದೀಶ್.ಸಿ ಅಗರ್‌ವಾಲಾ ಹೇಳಿದ್ದಾರೆ.
ಭಾರತದ ಸರ್ವೋಚ್ಚ ನ್ಯಾಯಾಲಯ 34 ನ್ಯಾಯಾಧೀಶರ ಅನುಮೋದಿತ ಬಲವನ್ನು ಹೊಂದಿದೆ. ಪ್ರಸ್ತುತ 31 ನ್ಯಾಯಾಧೀಶರೊಂದಿಗೆ ಕಾರ್ಯ ನಿರ್ವಹಿಸುತ್ತಿದೆ.