ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LS poll: ರಾಹುಲ್ ಸೇರಿ 40 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದ ಕಾಂಗ್ರೆಸ್‌ ​​​

Published 8 ಮಾರ್ಚ್ 2024, 3:35 IST
Last Updated 8 ಮಾರ್ಚ್ 2024, 3:35 IST
ಅಕ್ಷರ ಗಾತ್ರ

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ರಾಹುಲ್ ಗಾಂಧಿ ಸೇರಿದಂತೆ 40 ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್‌ನ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಗುರುವಾರ ಅಂತಿಮಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.

ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಿಇಸಿ ಸಭೆಯಲ್ಲಿ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 60 ಲೋಕಸಭಾ ಸ್ಥಾನಗಳ ಕುರಿತು ಚರ್ಚೆ ನಡೆಸಲಾಗಿದೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.

ದೆಹಲಿ, ಕರ್ನಾಟಕ, ಕೇರಳ, ಛತ್ತೀಸಗಢ, ತೆಲಂಗಾಣ, ಸಿಕ್ಕಿಂ, ತ್ರಿಪುರ, ನಾಗಾಲ್ಯಾಂಡ್, ಮಣಿಪುರ, ಮೇಘಾಲಯ ಮತ್ತು ಲಕ್ಷ್ವದೀಪದ ಲೋಕಸಭೆ ಸ್ಥಾನಗಳ ಕುರಿತು ಚರ್ಚೆಗಳು ನಡೆದವು.

'ಕೇರಳದಲ್ಲಿ ಕಾಂಗ್ರೆಸ್‌ 16 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಉಳಿದ 4 ಸ್ಥಾನಗಳಲ್ಲಿ ಅದರ ಮಿತ್ರಪಕ್ಷಗಳು ಸ್ಪರ್ಧಿಸಲಿವೆ. 16 ಸ್ಥಾನಗಳಲ್ಲಿ ಅಭ್ಯರ್ಥಿಗಳು ಯಾರು ಎಂಬ ಬಗ್ಗೆ ಸಿಇಸಿ ನಿರ್ಧಾರ ಕೈಗೊಂಡಿದೆ. ಶುಕ್ರವಾರ ಎಐಸಿಸಿ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಿದೆ ಎಂದು ಕಾಂಗ್ರೆಸ್‌ನ ಶಾಸಕಾಂಗ ಪಕ್ಷದ ನಾಯಕ ವಿ.ಡಿ ಸತೀಶನ್ ಹೇಳಿದ್ದಾರೆ.

ಮೂಲಗಳ ಪ್ರಕಾರ ರಾಹುಲ್ ಗಾಂಧಿ ಕೇರಳದ ವಯನಾಡು ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ.

'ದೆಹಲಿ ಅಭ್ಯರ್ಥಿಗಳ ಬಗ್ಗೆ ಪ್ರಾಥಮಿಕ ಚರ್ಚೆ ನಡೆದಿದೆ. ಅಲ್ಲಿ ಪಕ್ಷವು ಮೂರು ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. 'ಇಂಡಿಯಾ' ಕೂಟದ ಮಿತ್ರ ಪಕ್ಷ ಎಎಪಿ ಉಳಿದ 4 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ. ಮಾರ್ಚ್ 11 ರಂದು ದೆಹಲಿ ಸ್ಥಾನಗಳ ಕುರಿತು ಮತ್ತೆ ಚರ್ಚೆ ನಡೆಯಲಿದೆ' ಎಂದು ಎಐಸಿಸಿ ದೆಹಲಿ ಉಸ್ತುವಾರಿ ದೀಪಕ್ ಬಬಾರಿಯಾ ಹೇಳಿದ್ದಾರೆ.

ಛತ್ತೀಸಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ರಾಜನಂದಗಾಂವ್‌ನಿಂದ ಕಣಕ್ಕಿಳಿಯಲಿದ್ದಾರೆ. ಮಾಜಿ ಸಚಿವ ತಾಮ್ರಧ್ವಜ್‌ ಸಾಹು ಅವರು ರಾಜ್ಯದ ಮಹಾಸಮುಂಡ್ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ಸಿದ್ಧರಾಗಿದ್ದಾರೆ. ಅಂತಿಮಗೊಂಡ ಅಭ್ಯರ್ಥಿಗಳಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ ವೇಣುಗೋಪಾಲ್ ಕೂಡ ಸೇರಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಛತ್ತೀಸಗಢದ ಮಾಜಿ ಉಪಮುಖ್ಯಮಂತ್ರಿ ಟಿ.ಎಸ್ ಸಿಂಗ್‌ದೇವ್ ಅವರು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಸಭೆಯಲ್ಲಿ ಖರ್ಗೆ, ಸೋನಿಯಾ ಗಾಂಧಿ, ವೇಣುಗೋಪಾಲ್ ಹಾಗೂ ಸಿಇಸಿಯ ಇತರ ಹಿರಿಯ ನಾಯಕರು ಉಪಸ್ಥಿತರಿದ್ದರು.

ಕಳೆದ ವಾರ ಬಿಜೆಪಿ ಲೋಕಸಭೆ ಚುನಾವಣೆಗೆ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆದರೆ ಕಾಂಗ್ರೆಸ್ ಈವರೆಗೆ ಯಾವುದೇ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ.

ಅಭ್ಯರ್ಥಿಗಳು ಪ್ರಚಾರ ಆರಂಭಿಸಲು ಅನುಕೂಲವಾಗುವಂತೆ ಪಕ್ಷವು ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶೀಘ್ರದಲ್ಲೇ ಘೋಷಿಸುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ .

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT