ನವದೆಹಲಿ: ಸಂವಿಧಾನದ ದಿನದ ಅಂಗವಾಗಿ ಇಂದು ( ನವೆಂಬರ್ 26) ಡಾ.ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ಸುಪ್ರೀಂ ಕೋರ್ಟ್‌ನ ಆವರಣದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅನಾವರಣಗೊಳಿಸಿದರು.
ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ .ವೈ ಚಂದ್ರಚೂಡ್ ಹಾಗೂ ಮುರ್ಮು ಅವರು ಸಸಿ ನಡುವ ಮೂಲಕ ಪ್ರತಿಮೆ ಉದ್ಘಾಟನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ 7 ಅಡಿ ಎತ್ತರದ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.
ಈ ವೇಳೆ ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಸೇರಿದಂತೆ ಸುಪ್ರೀಂ ಕೋರ್ಟ್‌ನ ಹಲವು ನ್ಯಾಯಾಧೀಶರು ಭಾಗಿಯಾಗಿದ್ದರು.
ಸಂವಿಧಾನ ಕರಡು ಸಮಿತಿಯ ಅಧ್ಯಕ್ಷರಾಗಿದ್ದ ಡಾ. ಅಂಬೇಡ್ಕರ್ ಅವರು 1949ರ ನವೆಂಬರ್ 26ರಂದು ಸಂವಿಧಾನವನ್ನು ಅಂಗೀಕರಿಸುವ ನಿರ್ಣಯವನ್ನು ಮಂಡಿಸಿದ್ದರು. 1950 ಜನವರಿ 26ರಂದು ಸಂವಿಧಾನವನ್ನು ಜಾರಿಗೆ ತರಲಾಯಿತು. ಸಂವಿಧಾನವನ್ನು ಸಭೆಯು ಅಂಗೀಕರಿಸಿದ ಇದೇ ದಿನವನ್ನು ‘ಸಂವಿಧಾನ ದಿನ’ವನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದೆ.