ನವದೆಹಲಿ: ಆರು ಮಂದಿ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಹಾಗೂ ಭಾರತೀಯ ಕುಸ್ತಿ ಫೆಡರೇಷನ್‌ನ ನಿರ್ಗಮಿತ ಅಧ್ಯಕ್ಷ ಬ್ರಿಜ್‌ಭೂಷಣ್ ಸಿಂಗ್ ವಿರುದ್ಧ ಸಲ್ಲಿಕೆಯಾಗಿರುವ ದೋಷಾರೋಪ ಪಟ್ಟಿಯ ಅನ್ವಯ ವಿಚಾರಣೆ ನಡೆಸುವ ಕುರಿತು ಜುಲೈ 1ರಂದು ಆದೇಶ ನೀಡಲಾಗುವುದು ಎಂದು ದೆಹಲಿ ಹೈಕೋರ್ಟ್ ಮಂಗಳವಾರ ಹೇಳಿದೆ.
ಪ್ರಕರಣಕ್ಕೆ ಸಂಬಂಧಿಸಿ ವಾದ–ಪ್ರತಿವಾದ ಆಲಿಸಿದ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಹರ್ಜೀತ್ ಸಿಂಗ್ ಜಸ್ಪಾಲ್, ವಿಚಾರಣೆಯನ್ನು ಮುಂದೂಡಿದರು.
‘ಹೊಸದಾಗಿ ಸಲ್ಲಿಸಿರುವ ದೋಷಾರೋಪ ಪಟ್ಟಿ ಸುದೀರ್ಘವಾಗಿದೆ. ಹೀಗಾಗಿ, ಕೂಲಂಕಷವಾಗಿ ಪರಿಶೀಲನೆ ನಡೆಸಿದ ನಂತರ ಇದನ್ನು ಪರಿಗಣಿಸುವ ಕುರಿತು ನಿರ್ಧರಿಸಲು ಸಾಧ್ಯ’ ಎಂದು ನ್ಯಾಯಾಧೀಶ ಜಸ್ಪಾಲ್ ಹೇಳಿದರು.
ಪ್ರಕರಣ ಕುರಿತು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು ಎಂದು ಕೋರಿ ಪ್ರತಿಭಟನನಿರತ ಕುಸ್ತಿಪಟುಗಳ ಪರವಾಗಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ನ್ಯಾಯಾಧೀಶರು ವಜಾಗೊಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.