ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಾರ್ಮಿಕರ ಬಗ್ಗೆ ಹೇಳಿಕೆ: ಡಿಎಂಕೆ ನಾಯಕ ದಯಾನಿಧಿ ಮಾರನ್ ಕ್ಷಮೆ ಯಾಚನೆ

Published 2 ಜನವರಿ 2024, 16:27 IST
Last Updated 2 ಜನವರಿ 2024, 16:27 IST
ಅಕ್ಷರ ಗಾತ್ರ

ಚೆನ್ನೈ: ಸಾಮಾಜಿಕ ಮಾಧ್ಯಮಗಳಲ್ಲಿ ಕಾರ್ಮಿಕರ ಕುರಿತು ತಾವು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಡಿಎಂಕೆ ಸಂಸದ ದಯಾನಿಧಿ ಮಾರನ್‌ ಮಂಗಳವಾರ ಕ್ಷಮೆಯಾಚಿಸಿದ್ದಾರೆ. ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದೂ ಅವರು ಹೇಳಿದ್ದಾರೆ.

ಕೇಂದ್ರದ ಮಾಜಿ ಸಚಿವರಾಗಿರುವ ಮಾರನ್‌, ತಮ್ಮ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಇರಲಿ ಎಂದು ಕೇಳಿದ್ದಾರೆ.

ಮಾರನ್‌ ಅವರು, ‘ಕೇವಲ ಹಿಂದಿ ಮಾತನಾಡುವ  ಉತ್ತರಪ್ರದೇಶ ಮತ್ತು ಬಿಹಾರದ ಜನರು ತಮಿಳುನಾಡಿನಲ್ಲಿ ಶೌಚಾಲಯ ತೊಳೆಯುವ ಮತ್ತು ಕಟ್ಟಡ ನಿರ್ಮಾಣ ಕೆಲಸಗಳಲ್ಲಿ ತೊಡಗಿದ್ದಾರೆ. ಆದರೆ, ಇಲ್ಲಿನ ಯುವಜನರು ಇಂಗ್ಲಿಷ್‌ ಪ್ರೌಢಿಮೆಯಿಂದ  ಸಾಫ್ಟ್‌ವೇರ್ ಎಂಜಿನಿಯರ್‌ಗಳಾಗಿ ಕೆಲಸ ಮಾಡುತ್ತಿದ್ದಾರೆ’ ಎಂದು ಹೇಳಿರುವ ಹಳೇ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಇತ್ತೀಚೆಗೆ ಹರಿದಾಡಿತ್ತು.

ಅದಕ್ಕೆ ಸಂಬಂಧಿಸಿದಂತೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸುವ ವೇಳೆ ಮಾರನ್‌ ನೀಡಿರುವ ಹೇಳಿಕೆ ಮತ್ತೆ ವಿವಾದ ಸೃಷ್ಟಿಸಿದೆ. ಅವರು ಸವಿತಾ ಸಮಾಜದ ವಿರುದ್ಧ ಮಾತನಾಡಿದ್ದಾರೆ ಎಂಬ ಟೀಕೆ ವ್ಯಕ್ತವಾಗಿದೆ.

ಈ ಕುರಿತಂತೆ ಬಿಜೆಪಿಯ ಐಟಿ ವಿಭಾಗದ ವಿರುದ್ಧ ಕಿಡಿಕಾರಿರುವ ಮಾರನ್, ರಾಜಕೀಯ ಲಾಭಕ್ಕಾಗಿ ವಿವಾದ ಸೃಷ್ಟಿಸಲಾಗುತ್ತಿದೆ ಎಂದು ದೂರಿದ್ದಾರೆ.

ಎಕ್ಸ್‌ (ಟ್ವಿಟರ್‌) ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ಕಳೆದ 9 ವರ್ಷಗಳಲ್ಲಿ ಬಿಜೆಪಿ ಮಾಡಿದ ಸಾಧನೆಗಳಿಗಿಂತ ಹೆಚ್ಚಾಗಿ ಜನರು ಸಂಕಷ್ಟ ಅನುಭವಿಸಿದ್ದಾರೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಕೇಂದ್ರದಲ್ಲಿ ಅಧಿಕಾರ ಕಳೆದುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ, ಬಿಜೆಪಿಯ ಐಟಿ ವಿಭಾಗವು, ವಿರೋಧ ಪಕ್ಷಗಳ ನಾಯಕರ ಹೇಳಿಕೆಗಳನ್ನೊಳಗೊಂಡ ತಿರುಚಿದ ವಿಡಿಯೊಗಳನ್ನು ಹರಿಬಿಡುವ ಮೂಲಕ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಕೆಲಸದಲ್ಲಿ ನಿರತವಾಗಿದೆ ಎಂದು ಆರೋಪಿಸಿದ್ದಾರೆ.

ಮುಂದುವರಿದು, ಮಾಧ್ಯಮದವರ ಪ್ರಶ್ನೆಗೆ ನಾನು ನೀಡಿದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಯಾರಿಗೂ ನೋವು ಮಾಡುವ ಉದ್ದೇಶ ನನ್ನದಾಗಿರಲಿಲ್ಲ. ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT