ಜಮ್ಮು: ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ವಿಧಾನಸಭೆ ಚುನಾವಣೆಯ ಮೂರನೇ ಹಾಗೂ ಕೊನೆಯ ಹಂತದ ಮತದಾನಕ್ಕೆ ಇಂದು ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಪ್ಟೆಂಬರ್ 18ರಂದು ಮೊದಲ ಹಂತದ ಮತದಾನ ನಡೆಯಲಿದ್ದು, ಮೂರನೇ ಹಾಗೂ ಕೊನೆಯ ಹಂತದ ಮತದಾನ ಅಕ್ಟೋಬರ್ 1ರಂದು ನಿಗದಿಯಾಗಿದೆ.
ಕುಪ್ವಾರ, ಬಾರಾಮುಲ್ಲಾ, ಬಂಡಿಪೋರಾ, ಉಧಂಪುರ, ಕಥುವಾ, ಸಾಂಬಾ ಮತ್ತು ಜಮ್ಮು ಜಿಲ್ಲೆಗಳು ಸೇರಿದಂತೆ 40 ವಿಧಾನಸಭೆ ಕ್ಷೇತ್ರಗಳಿಗೆ ಕೊನೆಯ ಹಂತದಲ್ಲಿ ಮತದಾನ ನಡೆಯಲಿದೆ.
ಕಾಶ್ಮೀರ ವಲಯದಲ್ಲಿ 16 ಹಾಗೂ ಜಮ್ಮು ವಲಯದಲ್ಲಿ 24 ಕ್ಷೇತ್ರಗಳಿಗೆ ಮತದಾನಕ್ಕೆ ಅಧಿಸೂಚನೆ ಹೊರಡಿಸಲಾಗಿದೆ.
ಸೆಪ್ಟೆಂಬರ್ 12 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಸೆ.13ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಸೆ.17 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.
90 ಸದಸ್ಯ ಬಲದ ಜಮ್ಮು ಮತ್ತು ಕಾಶ್ಮೀರದಲ್ಲಿ ಒಟ್ಟು ಮೂರು ಹಂತಗಳಲ್ಲಿ ಮತದಾನ ನಡೆಯಲಿದೆ. ಸೆಪ್ಟೆಂಬರ್ 18ರಂದು ಮೊದಲ ಹಂತ, ಸೆ. 25ರಂದು ಎರಡನೇ ಹಂತ ಮತ್ತು ಅಕ್ಟೋಬರ್ 1ರಂದು ಮೂರನೇ ಹಾಗೂ ಕೊನೆಯ ಹಂತದ ಮತದಾನ ನಡೆಯಲಿದೆ.
ಅಕ್ಟೋಬರ್ 4ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ 10 ವರ್ಷಗಳ ಬಳಿಕ ಚುನಾವಣೆ ನಡೆಯುತ್ತಿದೆ.