ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಜಾಮೀನು ಕೋರಿ ಕೇಜ್ರಿವಾಲ್‌ ಅರ್ಜಿ: ಸಿಬಿಐಗೆ ಹೈಕೋರ್ಟ್ ನೋಟಿಸ್‌

ದೆಹಲಿ ಅಬಕಾರಿ ನೀತಿ ಹಗರಣ
Published 5 ಜುಲೈ 2024, 12:51 IST
Last Updated 5 ಜುಲೈ 2024, 12:51 IST
ಅಕ್ಷರ ಗಾತ್ರ

ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ಸಲ್ಲಿಸಿರುವ ಜಾಮೀನು ಅರ್ಜಿಗೆ ಪ್ರತಿಕ್ರಿಯಿಸುವಂತೆ ದೆಹಲಿ ಹೈಕೋರ್ಟ್ ಶುಕ್ರವಾರ ಸಿಬಿಐಗೆ ಸೂಚಿಸಿದೆ.

ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ಅವರು ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಸಿಬಿಐಗೆ ನೋಟಿಸ್ ಜಾರಿ ಮಾಡಿದ್ದು, ಜುಲೈ 17ರಂದು ವಿಚಾರಣೆಗೆ ಪಟ್ಟಿ ಮಾಡಿದ್ದಾರೆ.

‘ಎಎಪಿ ನಾಯಕ ಅಪಾಯಕಾರಿಯೂ ಅಲ್ಲ, ಉಗ್ರಗ್ರಾಮಿಯೂ ಅಲ್ಲ. ಜಾರಿ ನಿರ್ದೇಶನಾಲಯವು (ಇ.ಡಿ) ದಾಖಲಿಸಿದ್ದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಮಂಜೂರಾದ ನಂತರ, ಸಿಬಿಐ ಬಂಧಿಸಿದೆ’ ಎಂದು ಕೇಜ್ರಿವಾಲ್‌ ಪರ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ವಾದ ಮಂಡಿಸಿದರು.

‘ಕೇಜ್ರಿವಾಲ್‌ ಅವರು ವಿಚಾರಣಾ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸದೆ, ಹೈಕೋರ್ಟ್‌ಗೆ ಸಲ್ಲಿಸಿದ್ದಾರೆ’ ಎಂದು ಸಿಬಿಐ ಪರ ವಕೀಲ ಡಿ.ಪಿ.ಸಿಂಗ್‌ ಆಕ್ಷೇಪ ವ್ಯಕ್ತಪಡಿಸಿದರು.

ಆಮ್‌ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕರೂ ಆದ ಕೇಜ್ರಿವಾಲ್‌ ಅವರನ್ನು ಸಿಬಿಐ ಜೂನ್ 26ರಂದು ತಿಹಾರ್ ಜೈಲಿನಲ್ಲಿ ಬಂಧಿಸಿತ್ತು. ಇ.ಡಿ ದಾಖಲಿಸಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಇನ್ನೂ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಜಾರಿ ನಿರ್ದೇಶನಾಲಯವು ಮಾರ್ಚ್‌ 21ರಂದು ಬಂಧಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಚಾರಣಾ ನ್ಯಾಯಾಲಯವು ಜೂನ್ 20ರಂದು ಜಾಮೀನು ಮಂಜೂರು ಮಾಡಿತ್ತು. ಈ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT