ಅಮೃತಸರ: ಇಲ್ಲಿನ ಸರ್ಕಾರಿ ಗುರುನಾನಕ್ ದೇವ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯೆಯೊಬ್ಬರು ಕರ್ತವ್ಯ ಮುಗಿಸಿ ಹಾಸ್ಟೆಲ್ ಕಡೆಗೆ ಹೋಗುತ್ತಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳವಾರ ತಡರಾತ್ರಿ ಘಟನೆ ನಡೆದಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
'ನಾನು ಕೆಲಸ ಮುಗಿಸಿಕೊಂಡು ಹಾಸ್ಟೆಲ್ ಕಡೆಗೆ ಹೋಗುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ನನ್ನನ್ನು ಅಡ್ಡಗಟ್ಟಿ ನನ್ನ ಬಳಿಯಿಂದ ಪರ್ಸ್ ಕಸಿದುಕೊಂಡನು. ಬಳಿಕ ಹತ್ಯೆ ಮಾಡುವುದಾಗಿ ಬೆದರಿಸಿ, ನನ್ನ ಅಂಗಾಂಗಗಳನ್ನು ಮುಟ್ಟಿ ಅನುಚಿತವಾಗಿ ವರ್ತಿಸಿದನು’ ಎಂದು ದೆಹಲಿ ಮೂಲದ ಸಂತ್ರಸ್ತೆ ಆರೋಪಿಸಿದ್ದಾರೆ.
ಘಟನಾ ಸ್ಥಳದಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ಆರೋಪಿ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಅಮೃತಸರ ಸಹಾಯಕ ಪೊಲೀಸ್ ಕಮಿಷನರ್ ಮಣಿಂದರ್‌ಪಾಲ್ ಸಿಂಗ್ ಹೇಳಿದ್ದಾರೆ.
ಆಗಸ್ಟ್ 9ರಂದು ಕೋಲ್ಕತ್ತದ ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ, ಹತ್ಯೆ ಮಾಡಲಾಗಿತ್ತು. ಘಟನೆ ಖಂಡಿಸಿ ಪಶ್ಚಿಮ ಬಂಗಾಳದಲ್ಲಿ ಆಕ್ರೋಶ ಭುಗಿಲೆದ್ದಿತ್ತು. ಇದೀಗ ಪಂಜಾಬ್‌ನ ಅಮೃತಸರದಲ್ಲಿ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿರುವುದು ರಾಷ್ಟ್ರವ್ಯಾಪಿ ಆಕ್ರೋಶಕ್ಕೆ ಕಾರಣವಾಗಿದೆ.