ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

18th Lok Sabha | ಜೂನ್ 15ರಿಂದ ಸಂಸತ್ತಿನ ಮೊದಲ ಅಧಿವೇಶನ ಸಾಧ್ಯತೆ

Published 8 ಜೂನ್ 2024, 1:57 IST
Last Updated 8 ಜೂನ್ 2024, 1:57 IST
ಅಕ್ಷರ ಗಾತ್ರ

ನವದೆಹಲಿ: ಹೊಸದಾಗಿ ಅಸ್ತಿತ್ವಕ್ಕೆ ಬರಲಿರುವ 18ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 15ಕ್ಕೆ ಆರಂಭವಾಗುವ ಸಂಭವ ಇದೆ ಎಂದು ಮೂಲಗಳು ತಿಳಿಸಿವೆ.

ಜೂನ್ ಮೂರನೇ ವಾರದಲ್ಲಿ ಸಂಸತ್ತಿನ ಮೊದಲ ಅಧಿವೇಶನ ನಡೆಯಲಿದ್ದು, ಲೋಕಸಭೆಗೆ ಆಯ್ಕೆಯಾಗಿರುವ ನೂತನ ಸದಸ್ಯರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಎರಡು ದಿನಗಳವರೆಗೆ ಮುಂದುವರಿಯುವ ಸಾಧ್ಯತೆಯಿದೆ. ನಂತರ ಹೊಸ ಸ್ಪೀಕರ್ ಆಯ್ಕೆ ನಡೆಯಲಿದೆ.

ರಾಷ್ಟ್ರಪತಿ ದ್ರೌಪರ್ದಿ ಮುರ್ಮು ಅವರು ಸಂಸತ್ತಿನ ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಆ ಮೂಲಕ ಅಧಿವೇಶನವನ್ನು ಔಪಚಾರಿಕವಾಗಿ ಉದ್ಘಾಟಿಸಲಿದ್ದಾರೆ.

ಅಧಿವೇಶನದ ದಿನಾಂಕಗಳ ಕುರಿತು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ. ಅಧಿವೇಶನದ ಸಂದರ್ಭದಲ್ಲಿ ಸಚಿವ ಸಂಪುಟದ ಹೊಸ ಸದಸ್ಯರನ್ನು ಉಭಯ ಸದನಗಳಿಗೆ ಪ್ರಧಾನಿ ಪರಿಚಯಿಸಲಿದ್ದಾರೆ.

ಜೂನ್ 22ಕ್ಕೆ ಅಧಿವೇಶನ ಮುಕ್ತಾಯಗೊಳ್ಳುವ ಸಾಧ್ಯತೆಯೂ ಇದೆ.

ರಾಷ್ಟ್ರಪತಿ ಭವನದಲ್ಲಿ ಜೂನ್ 9ರಂದು (ಭಾನುವಾರ) ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜತೆಗೆ 30 ಸಂಸದರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಂಭವ ಇದೆ. ಪ್ರತಿಜ್ಞಾವಿಧಿ ಬಳಿಕ ಸಂಪುಟ ಸಭೆ ನಡೆಯಲಿದೆ.

ಸಂಸತ್ತಿನಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ನಾಯಕನನ್ನಾಗಿ ನರೇಂದ್ರ ಮೋದಿ ಅವರನ್ನು ಎನ್‌ಡಿಎ ಸಂಸದರು ಶುಕ್ರವಾರ ಅವಿರೋಧವಾಗಿ ಆಯ್ಕೆ ಮಾಡಿದ್ದರು. ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಮೋದಿ ಅವರು ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.

543 ಸದಸ್ಯ ಬಲದ ಲೋಕಸಭೆಯಲ್ಲಿ ಎನ್‌ಡಿಎ ಒಕ್ಕೂಟ 293 ಸ್ಥಾನಗಳಲ್ಲಿ ಜಯಿಸಿತ್ತು. ಬಿಜೆಪಿಗೆ 240 ಸ್ಥಾನಗಳು ಲಭಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT