ಮುಂಬೈ: ಮಹಾರಾಷ್ಟ್ರದ ಧಾರಾಶಿವದಲ್ಲಿ 15 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದ ಮೇಲೆ ನಾಲ್ವರನ್ನು ಭಾನುವಾರ ಬಂಧಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಶನಿವಾರ ಮಧ್ಯಾಹ್ನ ಬಾಲಕಿ ದಿನಸಿ ಅಂಗಡಿಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿತ್ತು. ಆರೋಪಿ ವಿಜಯ್ ಘಡ್ಗೆ (25) ಎಂಬಾತ ಬಾಲಕಿಯನ್ನು ತನ್ನ ಮನೆಗೆ ಕರೆದುಕೊಂಡು ಹೋಗಿದ್ದ. ಈ ವೇಳೆ ಆತನ ಮನೆಯಲ್ಲಿ ಇನ್ನೂ ನಾಲ್ವರು ಪುರುಷರು ಹಾಜರಿದ್ದರು. ಘಡ್ಗೆ ಮೊದಲು ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ. ಬಳಿಕ ಇತರ ಇಬ್ಬರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಎಫ್‌ಐಆರ್ ಅನ್ನು ಉಲ್ಲೇಖಿಸಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಮನೆಗೆ ಬಂದ ಬಾಲಕಿ ಸಾಮೂಹಿಕ ಅತ್ಯಾಚಾರದ ಬಗ್ಗೆ ತನ್ನ ಕುಟುಂಬಸ್ಥರಿಗೆ ತಿಳಿಸಿದ್ದಾಳೆ. ಬಳಿಕ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಪ್ರಕರಣದ ಪ್ರಮುಖ ಆರೋಪಿ ವಿಜಯ್ ಘಡ್ಗೆ ಪರಾರಿಯಾಗಿದ್ದು, ಇತರ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.