ಅಹಮದಾಬಾದ್: ಗುಜರಾತ್‌ನಲ್ಲಿ ಬಿಡಾಡಿ ದನಗಳ ಹಾವಳಿಯಿಂದ ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು, ಇದಕ್ಕೆ ಕಡಿವಾಣ ಹಾಕುವುದಕ್ಕಾಗಿ ರಾಜ್ಯದಲ್ಲಿ ಸುಮಾರು 50 ಸಾವಿರ ಗೂಳಿಗಳಿಗೆ ಸಂತಾನಶಕ್ತಿಹರಣ ಶಸ್ತ್ರಚಿಕಿತ್ಸೆ ನಡೆಸಲು ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
‘ಶಸ್ತ್ರಚಿಕಿತ್ಸೆಯ ನಂತರ ಗೂಳಿಗಳ ಕಿವಿಗಳಿಗೆ ‘ಟ್ಯಾಗ್’ ಹಾಕಲಾಗುತ್ತದೆ. ಬಳಿಕ ಅವುಗಳನ್ನು ಗೋಶಾಲೆಗಳಿಗೆ ರವಾನಿಸಲಾಗುತ್ತದೆ’ ಎಂದು ಆರೋಗ್ಯ ಸಚಿವ ರಿಷಿಕೇಶ್ ಪಟೇಲ್ ಹೇಳಿದ್ದಾರೆ.
‘ಗೂಳಿಗಳು ಹೆಚ್ಚು ಆಕ್ರಮಣಕಾರಿಯಾಗಿರುತ್ತವೆ. ಅವುಗಳಿಂದಾಗಿಯೇ ಶೇ 60 ರಿಂದ 70ರಷ್ಟು ರಸ್ತೆ ಅಪಘಾತಗಳು ಸಂಭವಿಸುತ್ತಿರುವ ಮಾಹಿತಿ ಲಭಿಸಿದೆ. ಹೀಗಾಗಿಯೇ ನಗರ ಹಾಗೂ ಗ್ರಾಮೀಣ ಭಾಗದಲ್ಲಿನ ಸುಮಾರು 50 ಸಾವಿರ ಬಿಡಾಡಿ ಗೂಳಿಗಳಿಗೆ ಸಂತಾನಶಕ್ತಿಹರಣ ಶಸ್ತ್ರಚಿಕಿತ್ಸೆ ನಡೆಸಲು ನಿರ್ಧರಿಸಲಾಗಿದೆ. ಪಶುವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕರು ಮತ್ತು ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳು ಸೇರಿದಂತೆ ತಜ್ಞರ ಸಲಹೆಯ ಆಧಾರದಲ್ಲಿ ಈ ಕಾರ್ಯ ಕೈಗೊಳ್ಳಲಾಗುತ್ತದೆ. ಇದಕ್ಕಾಗಿ ತಂಡಗಳನ್ನೂ ರಚಿಸಲಾಗುತ್ತದೆ’ ಎಂದೂ ಮಾಹಿತಿ ನೀಡಿದ್ದಾರೆ.