ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಹುಲ್‌ ಗಾಂಧಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ: ಕಾರಣವೇನು?

ಅಕ್ಷರ ಗಾತ್ರ

ಬೆಂಗಳೂರು: ‘ಸಿದ್ಧಾಂತವಿಲ್ಲದ ಪ್ರಾದೇಶಿಕ ಪಕ್ಷಗಳು, ಬಿಜೆಪಿ ಮತ್ತು ಆರ್‌ಎಸ್‌ಎಸ್‌ ವಿರುದ್ಧ ಹೋರಾಡುವುದು ಸಾಧ್ಯವಿಲ್ಲ’ ಎಂದು ಹೇಳಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ ಕುಮಾರಸ್ವಾಮಿ ಸೋಮವಾರ ತರಾಟೆಗೆ ತೆಗೆದುಕೊಂಡಿದ್ದಾರೆ.

ರಾಜಸ್ಥಾನದ ಉದಯಪುರದಲ್ಲಿ ನಡೆದ ಕಾಂಗ್ರೆಸ್‌ನ ಚಿಂತನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ್ದ ಸಂಸದ ರಾಹುಲ್‌ ಗಾಂಧಿ ಅವರು, ‘ಪ್ರಾದೇಶಿಕ ಪಕ್ಷಗಳು ಹೋರಾಡುವುದಕ್ಕೇ ಸಾಧ್ಯವಿಲ್ಲ. ಇದು ಸಿದ್ಧಾಂತಕ್ಕಾಗಿ ಇರುವ ಹೋರಾಟ. ಪ್ರಾದೇಶಿಕ ಪಕ್ಷಗಳಿಗೆ ಸ್ಥಾನ ಇದ್ದೇ ಇದೆ. ಆದರೆ, ಈ ಪಕ್ಷಗಳು ಬಿಜೆಪಿಯನ್ನು ಸೋಲಿಸಲು ಸಾಧ್ಯವಿಲ್ಲ. ಏಕೆಂದರೆ ಈ ಪಕ್ಷಗಳಿಗೆ ಸಿದ್ಧಾಂತವೇ ಇಲ್ಲ. ಅವರ ಧೋರಣೆಯೇ ಭಿನ್ನ. ಆದರೆ, ನಮ್ಮದು ಕೇಂದ್ರೀಕೃತ ಧೋರಣೆ’ ಎಂದಿದ್ದರು.

ರಾಹುಲ್‌ ಗಾಂಧಿ ಅವರ ಈ ಅಭಿಪ್ರಾಯ ಎಚ್‌.ಡಿ ಕುಮಾರಸ್ವಾಮಿ ಅವರನ್ನು ಕೆರಳಿಸಿದೆ. ಹೀಗಾಗಿ ಸರಣಿ ಟ್ವೀಟ್‌ ಮಾಡಿರುವ ಅವರು, ರಾಹುಲ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

‘ಸೈದ್ಧಾಂತಿಕ ಬದ್ಧತೆ ಎಂದರೆ ಏನು? ರಾಹುಲ್‌ಗಾಂಧಿ ಅವರು ಪ್ರಾದೇಶಿಕ ಪಕ್ಷಗಳಿಗೆ ಸ್ವಲ್ಪ ಬಿಡಿಸಿ ಹೇಳಬೇಕು. ರಾಜೀವ್‌ ಗಾಂಧಿ ಹತ್ಯೆ ಪ್ರಕರಣದ ನೆಪವೊಡ್ಡಿ ಡಿಎಂಕೆಯನ್ನು ಸಂಪುಟದಿಂದ ಹೊರಗಿಡಲು ಐ.ಕೆ.ಗುಜ್ರಾಲ್‌ ನೇತೃತ್ವದ ಸಂಯುಕ್ತ ರಂಗ ಸರ್ಕಾವನ್ನು ಉರುಳಿಸಿದ ಕಾಂಗ್ರೆಸ್‌, ನಂತರದ ದಿನಗಳಲ್ಲಿ ಅದೇ ಪಕ್ಷದ ಹೆಗಲ ಮೇಲೆ ಕೈ ಹಾಕಿದ್ದಾ’ ಎಂದು ಪ್ರಶ್ನೆ ಮಾಡಿದ್ದಾರೆ.

‘ಯುಪಿಎ 1 ಮತ್ತು 2 ಸರ್ಕಾರದಲ್ಲಿ ಡಾ.ಮನಮೋಹನ್‌ ಸಿಂಗ್‌ ನೇತೃತ್ವದ ಸಂಪುಟದಲ್ಲಿ ಅದೇ ಡಿಎಂಕೆಯ ಜತೆ 10 ವರ್ಷ ಅಧಿಕಾರದ ಸೋಪಾನ ಹಂಚಿಕೊಂಡಿದ್ದು ಸೈದ್ಧಾಂತಿಕ ಬದ್ಧತೆಯೇ?’ ಎಂದು ಅವರು ಮತ್ತೊಂದು ಪ್ರಶ್ನೆ ಕೇಳಿದ್ದಾರೆ.

‘ಬಿಜೆಪಿ ಸೋಲಿಸುವ ಶಕ್ತಿ ಕಾಂಗ್ರೆಸ್‌ʼಗೆ ಮಾತ್ರ ಇದೆ ಎನ್ನುವ ರಾಹುಲ್‌ ಗಾಂಧಿ ಅವರು, ತಮ್ಮ ಪಕ್ಷ 10 ವರ್ಷ ಅಧಿಕಾರದ ಸುಖ ಅನುಭವಿಸಿದ್ದು ಪ್ರಾದೇಶಿಕ ಪಕ್ಷಗಳ ಶಕ್ತಿ ಮತ್ತು ದಾಕ್ಷಿಣ್ಯದಿಂದ ಎನ್ನುವುದನ್ನು ಮರೆಯಬಾರದು. ಮೈತ್ರಿ ಸರ್ಕಾರ ಮಾಡೋಣ ಎಂದು ಮನೆ ಬಾಗಿಲಿಗೆ ಬಂದು, ಸರ್ಕಾರವನ್ನೂ ಮಾಡಿ ಹಿಂಬಾಗಿಲಿನಿಂದ ಆಪರೇಷನ್‌ ಕಮಲವೆಂಬ ಅನೈತಿಕ ರಾಜಕಾರಣಕ್ಕೆ ʼಕೈʼಜೋಡಿಸಿದ್ದು ಸೈದ್ಧಾಂತಿಕ ಬದ್ಧತೆಯೇ? ಮಿತ್ರಪಕ್ಷಗಳನ್ನೇ ನುಂಗಿಹಾಕುವುದೂ ಸೈದ್ಧಾಂತಿಕ ರಾಜಕಾರಣವಾ’ ಎಂದು ಅವರು ಕಿಡಿ ಕಾರಿದ್ದಾರೆ

‘ಪ್ರಾದೇಶಿಕ ಪಕ್ಷಗಳ ಫೋಬಿಯಾದಲ್ಲಿರುವ ಕಾಂಗ್ರೆಸ್ ಪಕ್ಷವು ಆಂಧ್ರ, ತೆಲಂಗಾಣ‌, ಒಡಿಶಾಗಳಲ್ಲಿ ಹೇಳಹೆಸರಿಲ್ಲದಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಕೊನೆಗಾಲದಲ್ಲಿದೆ. ಇದನ್ನು ರಾಹುಲ್‌ಗಾಂಧಿ ಅರ್ಥ ಮಾಡಿಕೊಂಡರೆ ಒಳ್ಳೆಯದು’ ಎಂದು ಸಲಹೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT