ಅಹಮದಾಬಾದ್/ಮುಂಬೈ : ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮಹಾರಾಷ್ಟ್ರ, ಗುಜರಾತ್ ರಾಜ್ಯಗಳ ಬಹುತೇಕ ನಗರಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಭಾರತೀಯ ಹವಾಮಾನ ಇಲಾಖೆ ವಿವಿಧ ಜಿಲ್ಲೆಗಳಿಗೆ ಜುಲೈ 24 ರವರೆಗೆ ರೆಡ್, ಯೆಲ್ಲೋ, ಆರೆಂಜ್ ಅಲರ್ಟ್ ಘೋಷಿಸಿದೆ.
ಜುಲೈ 24 ರವರೆಗೆ ಮಳೆ ಮುಂದುವರಿಯುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಗುಜರಾತ್‌ನ ಜುನಾಗಢ್, ಜಾಮ್‌ನಗರ, ದೇವಭೂಮಿ ದ್ವಾರಕಾ, ಕಚ್, ಸೂರತ್‌ನಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಮಳೆಯ ಅಬ್ಬರದಿಂದ ರಸ್ತೆಗಳು ನದಿಗಳಂತಾಗಿದ್ದು, ಕಾರು ಸೇರಿದಂತೆ ಹಲವು ವಾಹನಗಳು ನೀರಿನಲ್ಲಿ ಕೊಚ್ಚಿ ಹೋಗುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಭೂಕುಸಿತ ಉಂಟಾಗಿರುವ ಮಹರಾಷ್ಟ್ರದ ರಾಯಗಢ ಜಿಲ್ಲೆಯ ಇರ್ಶಲ್ವಾಡಿಯಲ್ಲಿ ಆಡಳಿತವು ಕ್ರಿಮಿನಲ್ ಪ್ರೊಸೀಜರ್ ಕೋಡ್ (ಸಿಆರ್‌ಪಿಡಿ) ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆಗಳನ್ನು ವಿಧಿಸಿದೆ. ನಿಷೇಧಾಜ್ಞೆ ಜುಲೈ 23 ರಿಂದ ಆಗಸ್ಟ್ 6 ರವರೆಗೆ ಜಾರಿಯಲ್ಲಿರುತ್ತದೆ ಎಂದು ತಿಳಿಸಿದೆ. ಭೂಕುಸಿತದಲ್ಲಿ ಸಾವಿನ ಸಂಖ್ಯೆ 27 ಕ್ಕೆ ಏರಿದೆ, ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಎನ್‌ಡಿಆರ್‌ಎಫ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇತ್ತ ಗುಜರಾತ್‌ನ ಜುನಾಗಢ್ ಪ್ರದೇಶದಲ್ಲಿ ಶನಿವಾರ ರಾತ್ರಿ 8 ಗಂಟೆಯವರೆಗೆ ಕೇವಲ 12 ಗಂಟೆಗಳಲ್ಲಿ 24.1 ಸೆಂ.ಮೀ ಮಳೆಯಾಗಿದೆ.
ಹವಾಮಾನ ಇಲಾಖೆಯು ಜುಲೈ 22 ರಿಂದ ಜುಲೈ 26 ರವರೆಗೆ ಉತ್ತರ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಿದ್ದು, ಈ ಅವಧಿಯಲ್ಲಿ ಚಂಡಮಾರುತದ ಮುನ್ಸೂಚನೆ ನೀಡಿದೆ.
ಮುಂಬೈನಲ್ಲಿ ಮಳೆಯ ಅಬ್ಬರ ಹೆಚ್ಚಿರುವ ಕಾರಣ, ಕಾಯಿಲೆಗಳು ಹರಡುವ ಸಾಧ್ಯತೆ ಇದ್ದು, ಆರೋಗ್ಯ ಇಲಾಖೆಯು ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ಸಲಹೆ ನೀಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.