ನವದೆಹಲಿ : ಎಡಬಿಡದೆ ಸುರಿಯುತ್ತಿರುವ ಮಳೆಗೆ ಉತ್ತರ ಭಾರತ ತತ್ತರಿಸಿ ಹೋಗಿದೆ. ಭಾನುವಾರ ಹಲವು ಭಾಗಗಳಲ್ಲಿ ಭಾರೀ ಮಳೆ ಸುರಿದಿದ್ದು, ಭೂಕುಸಿತ ಮತ್ತು ಇತರ ಮಳೆ ಸಂಬಂಧಿತ ಅವಘಡಗಳಲ್ಲಿ 15 ಜನರು ಸಾವನ್ನಪ್ಪಿದ್ದಾರೆ.
ಹತ್ನಿಕುಂಡ್ ಬ್ಯಾರೇಜ್‌ನಿಂದ ಯಮುನಾ ನದಿಗೆ ಹರಿಯಾಣ ಒಂದು ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ಸ್ ನೀರನ್ನು ಬಿಡುಗಡೆ ಮಾಡಿದ್ದರಿಂದ ದೆಹಲಿ ಸರ್ಕಾರ ಪ್ರವಾಹದ ಎಚ್ಚರಿಕೆ ನೀಡಿದೆ. ಇದು ಮೊದಲ ಎಚ್ಚರಿಕೆ ಎಂದು ನೀರಾವರಿ ಮತ್ತು ಪ್ರವಾಹ ನಿಯಂತ್ರಣ ಇಲಾಖೆ ತಿಳಿಸಿದ್ದು, 1,05,453 ಕ್ಯೂಸೆಕ್ ನೀರನ್ನು ಹೊರಬಿಡಲಾಗಿದೆ.
ಗುಡ್ಡಪ್ರದೇಶಗಳಲ್ಲಿ ರಸ್ತೆಗಳು ಕೊಚ್ಚಿಹೋಗಿದ್ದು, ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಭೇಟಿ ನೀಡುವಂತೆ ಪ್ರವಾಸಿಗರಿಗೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಮಳೆಯ ಪರಿಣಾಮ ರೈಲು ಸಂಚಾರಕ್ಕೂ ಅಡ್ಡಿಯಾಗಿದೆ. ಉತ್ತರ ರೈಲ್ವೆಯು 17 ರೈಲುಗಳ ಸಂಚಾರವನ್ನು ರದ್ದುಗೊಳಿಸಿದ್ದು, 12 ರೈಲುಗಳ ಮಾರ್ಗ ಬದಲಾವಣೆ ಮಾಡಿದೆ. ಅಲ್ಲದೆ ಜಲಾವೃತದಿಂದಾಗಿ ನಾಲ್ಕು ಕಡೆ ಸಂಚಾರ ಸ್ಥಗಿತಗೊಳಿಸಲಾಗಿದೆ.
ಯಮುನಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ದೆಹಲಿ ಜನರಿಗೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಜಮ್ಮು ಮತ್ತು ಕಾಶ್ಮೀರ, ಲಡಾಖ್ ಮತ್ತು ಹಿಮಾಚಲ ಪ್ರದೇಶದ ಕೆಲವು ಪ್ರದೇಶಗಳಿಗೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಹಿಮಾಚಲ ಪ್ರದೇಶದಲ್ಲಿ ಭೂಕುಸಿತ, ಐವರ ಸಾವು
ಮೂರು ಪ್ರತ್ಯೇಕ ಭೂಕುಸಿತದ ಘಟನೆಗಳಲ್ಲಿ ಐವರು ಸಾವನ್ನಪ್ಪಿದ್ದು, ಏಳು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಶಿಮ್ಲಾದಲ್ಲಿ ಮನೆ ಕುಸಿದು ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ.
ಹಿಮಾಚಲ ಪ್ರದೇಶದ ತುರ್ತು ಕಾರ್ಯಾಚರಣೆ ಕೇಂದ್ರ ನೀಡಿದ ಮಾಹಿತಿ ಪ್ರಕಾರ, ಕಳೆದ 36 ಗಂಟೆಗಳಲ್ಲಿ 14 ಪ್ರಮುಖ ಭೂಕುಸಿತ, 13 ಕಡೆ ಹಠಾತ್ ಪ್ರವಾಹ ಸಂಭವಿಸಿದ್ದು 700 ಕ್ಕೂ ಹೆಚ್ಚು ರಸ್ತೆಗಳನ್ನು ಬಂದ್ ಮಾಡಲಾಗಿದೆ.
ಇಲ್ಲಿಯ ಕೊಟ್ಲಿಯಿಂದ ಜೋಗಿಂದರ್ ನಗರಕ್ಕೆ ಸಂಪರ್ಕ ಕಲ್ಪಿಸುವ ಬಿಯಾಸ್ ನದಿಗೆ ಅಡ್ಡಲಾಗಿದ್ದ ಸೇತುವೆ ಕುಸಿದಿದೆ. ಇದರ ವಿಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ.
Now i lost the count , Beas River inhales several bridges today
— Weatherman Shubham (@shubhamtorres09) July 9, 2023
So Heartbreaking to see 🙏🏻
Kun ka Tar Bridge connecting Kotli with Jogindernagar collapsed#HimachalPradesh pic.twitter.com/ng7iFmR2aS
ಉತ್ತರಖಾಂಡ್: ಗಂಗಾನದಿ ಪಾಲಾದ ಮೂವರು ಯಾತ್ರಿಕರು
ಪಕ್ಕದ ಉತ್ತರಖಾಂಡ್‌ನಲ್ಲೂ ಮಳೆ ಮುಂದುವರಿದಿದೆ. ರಿಷಿಕೇಶ್–ಬದರಿನಾಥ್ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ಗಂಗಾ ನದಿಗೆ ಜೀಪ್ ಉರುಳಿ ಮೂವರು ಸಾವನ್ನಪ್ಪಿದ್ದಾರೆ. ಜೀಪ್‌ನಲ್ಲಿ 11 ಮಂದಿಯಿದ್ದು, ಐವರನ್ನು ರಕ್ಷಿಸಲಾಗಿದೆ, ಮೂವರ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಉಳಿದವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪಡೆ ಮತ್ತು ಪೊಲೀಸರು ತಿಳಿಸಿದ್ದಾರೆ.
ಹರಿಯಾಣದಲ್ಲಿ ಮಾರ್ಕಂಡ, ಘಗ್ಗರ್ ಮತ್ತು ತಂಗ್ರಿ ಎಂಬ ಮೂರು ನದಿಗಳು ಅಪಾಯದ ಅಂಚಿನಲ್ಲಿ ಹರಿಯುತ್ತಿದ್ದು ನೆರೆ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. ಹಲವು ಗ್ರಾಮಗಳು ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ ಎಂದು ವರದಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.