ಶ್ರೀನಗರ: ಹಿಮಪಾತದಿಂದಾಗಿ ಕಾಶ್ಮೀರದಲ್ಲಿ ಸಾಮಾನ್ಯ ಜನಜೀವನ ವ್ಯತ್ಯಯಗೊಂಡಿದೆ. ಭಾನುವಾರ ಇಡೀ ದಿನ ಹಿಮ ಸುರಿಯುತ್ತಿದ್ದ ಕಾರಣ ಶ್ರೀನಗರ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟವನ್ನು ಬಂದ್ ಮಾಡಲಾಗಿತ್ತು. ಹಿಮಪಾತ ಸೋಮವಾರವೂ ಮುಂದುವರಿದಿದೆ.
ಇದರ ಜತೆಗೆ ಜಮ್ಮು-ಶ್ರೀನಗರದ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿದೆ.
ಮುಂದಿನ 24 ಗಂಟೆಗಳ ಕಾಲ ಎತ್ತರದ ಪ್ರದೇಶದಲ್ಲಿ ಭಾರಿ ಹಿಮಪಾತ ಸಂಭವಿಸುವ ಸಾಧ್ಯತೆ ಇದ್ದು, ಅನಗತ್ಯ ಓಡಾಟವನ್ನು ತಪ್ಪಿಸುವಂತೆ ಜನರಿಗೆ ಎಚ್ಚರಿಕೆ ನೀಡಲಾಗಿದೆ.
ಹವಾಮಾನ ವೈಪರೀತ್ಯದಿಂದಾಗಿ ರಿಯಾಸಿ ಜಿಲ್ಲೆಯ ತ್ರಿಕೂಟ ಬೆಟ್ಟಗಳ ಮೇಲಿರುವ ಮಾತಾ ವೈಷ್ಣೋದೇವಿ ದೇಗುಲಕ್ಕೆ ಹೆಲಿಕಾಪ್ಟರ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ರಾಜಧಾನಿಯಾದ ಶ್ರೀನಗರದಲ್ಲಿ ತಾಪಮಾನ ಕನಿಷ್ಠ ಮಟ್ಟಕ್ಕೆ ಕುಸಿದಿದ್ದು ಮೈನಸ್ 0.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಹಿಮಾಚಲ ಪ್ರದೇಶದಲ್ಲೂ ಹಿಮಪಾತ
ಹಿಮಪಾತದಿಂದಾಗಿ ಹಿಮಾಚಲ ಪ್ರದೇಶದಲ್ಲಿ 475ಕ್ಕೂ ಹೆಚ್ಚು ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್ ಮಾಡಲಾಗಿದೆ. ತಾಪಮಾನ ಕನಿಷ್ಠ ಮಟ್ಟಕ್ಕೆ ಕುಸಿದಿದ್ದು ವಿದ್ಯುತ್, ನೀರು ಪೂರೈಕೆಯಲ್ಲಿ ವ್ಯತ್ಯಯವಾಗಿದೆ.
ಎಲ್ಲೆಡೆ ಹಿಮರಾಶಿ ಬಿದ್ದಿದ್ದು, ಪ್ರವಾಸಿಗರ ಸಂಖ್ಯೆಯೂ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಎಂದು ಸ್ಥಳೀಯರು ಹೇಳಿದ್ದಾರೆ.