ತಿರುವನಂತಪುರ: ಮಲಯಾಳಂ ಚಿತ್ರರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಬಿಡುಗಡೆಯಾಗಿರುವ ಹೇಮಾ ಸಮಿತಿಯ ವರದಿಯಲ್ಲಿನ ಅಂಶಗಳನ್ನು ಗಮನಿಸಿ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು, ಕೆಲಸದ ಸ್ಥಳದಲ್ಲಿ ಮಹಿಳೆಯರ ಸುರಕ್ಷತೆಯನ್ನು ಒದಗಿಸಬೇಕು ಎನ್ನುವ ಕೂಗು ಜೋರಾಗಿದೆ.
ಪ್ರತಿಪಕ್ಷ ಕಾಂಗ್ರೆಸ್ ನೇತೃತ್ವದ ಯುಡಿಎಫ್, ದೂರುಗಳ ತನಿಖೆಗೆ ಮಹಿಳಾ ಐಪಿಎಸ್ ಅಧಿಕಾರಿಗಳ ತಂಡವನ್ನು ರಚಿಸಬೇಕು ಎಂದು ಆಗ್ರಹಿಸಿದೆ. ಇನ್ನೊಂದೆಡೆ ರಾಜ್ಯ ಮಹಿಳಾ ಆಯೋಗವು ವರದಿಯಲ್ಲಿ ಸೂಚಿಸಲಾದ ಸಮಸ್ಯೆಗಳನ್ನು ಪರಿಹರಿಸಲು ಅಧಿಕಾರಿಗಳು ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಕೋರಿದೆ.
ವರದಿಯನ್ನು ಬಿಡುಗಡೆ ಮಾಡಿರುವ ಕ್ರಮವನ್ನು ಸ್ವಾಗತಿಸಿದ ವುಮೆನ್ ಇನ್ ಸಿನಿಮಾ ಕಲೆಕ್ಟಿವ್ (WCC), ಕೆಲಸದ ಸ್ಥಳದಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ವಿಶ್ವಾಸವ್ಯಕ್ತಪಡಿಸಿದೆ.
ಚಿತ್ರರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಅಧ್ಯಯನಕ್ಕೆ ಕೇರಳ ಸರ್ಕಾರ 2019ರಲ್ಲಿ ನೇಮಿಸಿದ್ದ ನ್ಯಾ. ಹೇಮಾ ಸಮಿತಿಯ ವರದಿಯು ಸುಮಾರು ಐದು ವರ್ಷಗಳ ಬಳಿಕ ಆರ್‌ಟಿಐ ಕಾಯ್ದೆಯಡಿ ಮಾಧ್ಯಮಗಳಿಗೆ ಲಭ್ಯವಾಗಿದೆ.