ಶಿಮ್ಲಾ: ಹಿಮಾಚಲ ಪ್ರದೇಶದ ಮೂರು ಜಿಲ್ಲೆಗಳಲ್ಲಿ ಮೇಘಸ್ಫೋಟದಿಂದ ಉಂಟಾದ ದಿಢೀರ್ ಪ್ರವಾಹಕ್ಕೆ ಸಿಲುಕಿ ಮೃತಪಟ್ಟವರ ಸಂಖ್ಯೆಯು 32ಕ್ಕೆ ಏರಿಕೆ ಆಗಿದೆ.
ಶುಕ್ರವಾರ ನಾಲ್ವರ ಮೃತದೇಹಗಳು ಪತ್ತೆಯಾಗಿವೆ. 23 ಮಂದಿ ಇನ್ನೂ ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಂಪುರದ ಸಮೀಪದ ಸುನ್ನಿ ಅಣೆಕಟ್ಟು ಮತ್ತು ಸಟ್ಲೆಜ್ ನದಿಪಾತ್ರದ ಬಳಿ ನಾಲ್ಕು ಮೃತದೇಹಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಇನ್ನೂ 14 ಮಂದಿ ನಾಪತ್ತೆಯಾಗಿದ್ದಾರೆ ಎಂದು ಶಿಮ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ್ ಕುಮಾರ್ ‘ಪಿಟಿಐ’ಗೆ ತಿಳಿಸಿದ್ದಾರೆ.
ನಾಪತ್ತೆಯಾಗಿರುವವರನ್ನು ಪತ್ತೆ ಮಾಡಲು ಡ್ರೋನ್, ಶ್ವಾನದಳ ಬಳಸಿ ಭಾನುವಾರವೂ ಕಾರ್ಯಾಚರಣೆ ಮುಂದುವರಿದಿದೆ. ಸೇನೆ, ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಐಟಿಬಿಪಿ ಸೇರಿದಂತೆ ವಿವಿಧ ಏಜೆನ್ಸಿಗಳ ಒಟ್ಟು 410 ಮಂದಿ ರಕ್ಷಣಾ ಕಾರ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಹಿಮಾಚಲ ಪ್ರದೇಶದಲ್ಲಿನ ಮೇಘಸ್ಫೋಟ ಹಾಗೂ ಪ್ರವಾಹದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ನದಿಗಳ ನೀರಿನ ಮಟ್ಟ ಅಪಾಯಕರ ರೀತಿಯಲ್ಲಿ ಏರಿಕೆಯಾಗಿದೆ. ಇಲ್ಲಿನ ಕುಲ್ಲು, ಮಂಡಿ ಹಾಗೂ ಶಿಮ್ಲಾ ಜಿಲ್ಲೆಗಳಲ್ಲಿ ಮೇಘಸ್ಫೋಟ ಸಂಭವಿಸಿದೆ. ಹಲವು ಮನೆಗಳು, ಸೇತುವೆಗಳು ಕೊಚ್ಚಿಹೋಗಿವೆ. ಈ ಜಿಲ್ಲೆಗಳಲ್ಲಿನ ರಸ್ತೆ ಸಂಪರ್ಕವು ಕಡಿತಗೊಂಡಿದೆ.