ಹೈದರಾಬಾದ್: ಆಂಧ್ರ ಪ್ರದೇಶದ ಚಿತ್ತೂರಿನಲ್ಲಿ ಶುಕ್ರವಾರ ಸಂಜೆ ಬಸ್ಸು ಹಾಗೂ ಟ್ರಕ್ ಡಿಕ್ಕಿಯಾಗಿ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಈ ಭೀಕರ ಅಪಘಾತದಲ್ಲಿ 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಬೆಂಗಳೂರು– ಚಿತ್ತೂರು ಹೆದ್ದಾರಿಯಲ್ಲಿ ಮೊಗಲಿ ಘಾಟ್‌ನಲ್ಲಿ ಅಪಘಾತ ಸಂಭವಿಸಿದೆ. ಮೃತಪಟ್ಟವರಲ್ಲಿ ಬಹುತೇಕ ಮಂದಿ ಬೆಂಗಳೂರಿನವರು ಎನ್ನಲಾಗಿದೆ. ಅವರು ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ವಾಪಸಾಗುತ್ತಿದ್ದರು.
ತಿರುಪತಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಆಂಧ್ರ ಪ್ರದೇಶ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿಯಾಗಿದೆ. ಇದೇ ವೇಳೆ ಇನ್ನೊಂದು ಟ್ರಕ್ ಬಸ್ಸಿನ ಹಿಂಬದಿಗೆ ಡಿಕ್ಕಿಯಾಗಿದೆ ಎಂದು ಮೂಲಗಳು ಹೇಳಿವೆ.
ಗಾಯಾಳುಗಳನ್ನು ಮೊದಲು ಪಲಮನೇರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು, ಆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ವೆಲ್ಲೂರು ಹಾಗೂ ಬೆಂಗಳೂರಿನ ಆಸ್ಪತ್ರೆಗಳಿಗೆ ಕರೆದೊಯ್ಯಲಾಯಿತು. ಚಿತ್ತೂರು ಜಿಲ್ಲಾಧಿಕಾರಿ ಸುಮಿತ್ ಕುಮಾರ್ ಅವರು ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ಘೋಷಿಸಿದ್ದಾರೆ.