ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಲೋಕಸಭೆ ಚುನಾವಣೆ | ಕಾಂಗ್ರೆಸ್, ಇಂಡಿಯಾ ಮೈತ್ರಿಕೂಟದ ಪರ ಜನರ ಒಲವು: ಖರ್ಗೆ

Published 21 ಮೇ 2024, 7:00 IST
Last Updated 21 ಮೇ 2024, 7:00 IST
ಅಕ್ಷರ ಗಾತ್ರ

ನವದೆಹಲಿ: ಕಾಂಗ್ರೆಸ್ ಮತ್ತು ‘ಇಂಡಿಯಾ’ ಮೈತ್ರಿಕೂಟದ ಕುರಿತು ಜನರ ಪ್ರತಿಕ್ರಿಯೆ ಗಮನಾರ್ಹವಾಗಿ ಬದಲಾಗಿದೆ. ಇದು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಪಡೆಯುವುದನ್ನು ತಡೆಯಲು ಸಹಾಯಕವಾಗಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಸುದ್ದಿಸಂಸ್ಥೆ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಮಾತಾನಾಡಿದ ಅವರು, ‘ಸಮಾಜದಲ್ಲಿ ದ್ವೇಷ ಮತ್ತು ವಿಭಜನೆ ಮನೋಭಾವನೆಯನ್ನು ಹರಡುವ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಸಿದ್ಧಾಂತದ ವಿರುದ್ಧ ಜನರು ಈಗ ಹೋರಾಡುತ್ತಿದ್ದಾರೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸಲು ‘ಇಂಡಿಯಾ’ ಮೈತ್ರಿಕೂಟ ಹೋರಾಟ ನಡೆಸುತ್ತಿದೆ ಎಂಬುದು ಜನರಿಗೆ ತಿಳಿದಿದೆ. ಆದ್ದರಿಂದಲೇ ಪಕ್ಷಕ್ಕೆ ಬೆಂಬಲ ನೀಡುತ್ತಿದ್ದಾರೆ’ ಎಂದು ತಿಳಿಸಿದ್ದಾರೆ.

ರಾಮ ಮಂದಿರ, ಹಿಂದೂ– ಮುಸ್ಲಿಂ ಮತ್ತು ಭಾರತ– ಪಾಕಿಸ್ತಾನದ ಹೆಸರಿನಲ್ಲಿ ಜನರನ್ನು ಬಿಜೆಪಿ ಪದೇ ಪದೇ ಪ್ರಚೋದಿಸುತ್ತಿದೆ. ಅಲ್ಲದೆ, ಜನರನ್ನು ಭಾವನಾತ್ಮವಾಗಿ ಲೂಟಿ ಮಾಡುತ್ತಿದೆ. ಜನರು ಈಗ ಬಿಜೆಪಿಯ ನಿಜವಾದ ಬಣ್ಣವನ್ನು ಅರ್ಥಮಾಡಿಕೊಂಡಿದ್ದಾರೆ ಎಂದು ಖರ್ಗೆ ಹೇಳಿದ್ದಾರೆ.

‘ದೇಶದಾದ್ಯಂತ ಸುತ್ತಾಡಿದ ಬಳಿಕ, ನಮ್ಮ (ಕಾಂಗ್ರೆಸ್‌) ಪರವಾಗಿ ಜನಮಾನಸದಲ್ಲಿ ಉತ್ತಮ ಮನೋಭಾವನೆ ಇದೆ ಎಂದು ನಮಗೆ ಅರ್ಥವಾಗುತ್ತಿದೆ. ‘ಇಂಡಿಯಾ’ ಮೈತ್ರಿಕೂಟ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಪಡೆಯುತ್ತದೆ. ಜನರು ನಾವು ಅನುಸರಿಸುವ ಸಿದ್ಧಾಂತವನ್ನು ಬೆಂಬಲಿಸುತ್ತಿದ್ದಾರೆ ಮತ್ತು ನಮಗಾಗಿ ಹೋರಾಡುತ್ತಿದ್ದಾರೆ. ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಾಗುವುದಿಲ್ಲ’ ಎಂದು ತಿಳಿಸಿದ್ದಾರೆ.

ದೇಶದಲ್ಲಿ ಬೆಲೆ ಏರಿಕೆ ಮತ್ತು ನಿರುದ್ಯೋಗ ಎರಡು ಪ್ರಮುಖ ಸಮಸ್ಯೆಗಳಾಗಿ ಹೊರಹೊಮ್ಮಿರುವುದರಿಂದ ಜನರು ಕೂಡ ಅಸಮಾಧಾನಗೊಂಡಿದ್ದಾರೆ. ಎರಡು ಕೋಟಿ ಉದ್ಯೋಗ ಸೃಷ್ಟಿ, ವಿದೇಶದಲ್ಲಿರುವ ಕಪ್ಪು ಹಣ ವಾಪಸ್‌ ತರುವುದು, ರೈತರ ಆದಾಯ ದ್ವಿಗುಣಗೊಳಿಸುವುದು ಹೀಗೆ ಈ ಹಿಂದೆ ನೀಡಿದ್ದ ಯಾವುದೇ ಭರವಸೆಗಳನ್ನು ಈಡೇರಿಸಲು ಬಿಜೆಪಿಗೆ ಸಾಧ್ಯವಾಗಿಲ್ಲ. ಬಿಜೆಪಿ ಸುಳ್ಳುಗಳನ್ನು ಹೇಳುವ ಮೂಲಕ ಜನರನ್ನು ಮೂರ್ಖರನ್ನಾಗಿಸುತ್ತಿದೆ ಎಂದು ಖರ್ಗೆ ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT