ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಬಿಕ್ಕಟ್ಟು ಉಲ್ಬಣಿಸುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ರಾಷ್ಟ್ರಗಳು ಸಂಯಮವನ್ನು ಕಾಪಾಡಿಕೊಳ್ಳಬೇಕು ಮತ್ತು ಸಂಘರ್ಷದ ಆಯಾಮವನ್ನು ಆಯ್ಕೆ ಮಾಡಿಕೊಳ್ಳಬಾರದು ಎಂದು ಭಾರತ ಕರೆ ನೀಡಿದೆ.
ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಮತ್ತು ಉಗ್ರಗಾಮಿ ಸಂಘಟನೆಯ ಇತರ ಕಮಾಂಡರ್‌ಗಳನ್ನು ಕೊಂದಿದ್ದಕ್ಕೆ ಪ್ರತಿಯಾಗಿ ಇಸ್ರೇಲ್ ಮೇಲೆ ಇರಾನ್ ಸುಮಾರು 200 ಕ್ಷಿಪಣಿಗಳನ್ನು ಹಾರಿಸಿದೆ. ಇದರ ಬೆನ್ನಲ್ಲೇ ಭಾರತ ಹೇಳಿಕೆ ನೀಡಿದೆ.
ಪಶ್ಚಿಮ ಏಷ್ಯಾದಲ್ಲಿ ರಾಷ್ಟ್ರಗಳಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಕುರಿತು ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ. ಜತೆಗೆ, ಮಾತುಕತೆ ಹಾಗೂ ರಾಜತಾಂತ್ರಿಕತೆಯ ಮೂಲಕ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕು ಎಂದು ಮನವಿ ಮಾಡಿದೆ.
‘ಪಶ್ಚಿಮ ಏಷ್ಯಾ ರಾಷ್ಟ್ರಗಳಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಬಗ್ಗೆ ನಾವು ತೀವ್ರ ಕಳವಳ ಹೊಂದಿದ್ದೇವೆ. ಸಂಬಂಧಪಟ್ಟ ರಾಷ್ಟ್ರಗಳು ಮಾತುಕತೆ ಹಾಗೂ ರಾಜತಾಂತ್ರಿಕತೆಯ ಮೂಲಕ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕು ಹಾಗೂ ನಾಗರಿಕರ ರಕ್ಷಣೆಗಾಗಿ ನಮ್ಮ ಮನವಿಯನ್ನು ಪುನರುಚ್ಚರಿಸುತ್ತೇವೆ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.