ಭುವನೇಶ್ವರ/ಬದ್ರಕ್: ಆಕ್ಷೇಪಾರ್ಹ ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಒಡಿಶಾದ ಭದ್ರಕ್ ಜಿಲ್ಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಎರಡು ದಿನಗಳು ಇಂಟರ್‌ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ.
ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡುವ ವಿಷಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ ಯುವಕನ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರು ವಿಳಂಬ ಮಾಡಿದ್ದಾರೆ ಎಂದು ಆರೋಪಿಸಿ ನಿರ್ದಿಷ್ಟ ಸಮುದಾಯವೊಂದರ ಸದಸ್ಯರು ಶುಕ್ರವಾರ ಪ್ರತಿಭಟನಾ ರ‍್ಯಾಲಿ ನಡೆಸಿದ್ದರು.
ಪೂರ್ವಾನುಮತಿಯಿಲ್ಲದೆ ನಡೆದ ರ‍್ಯಾಲಿಯನ್ನು ಪೊಲೀಸರು ತಡೆದಾಗ, ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದು, ಡಿಎಸ್‌ಪಿ ಸೇರಿದಂತೆ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಮರುಸ್ಥಾಪಿಸಲು ಮತ್ತು ಪ್ರಚೋದಕಾರಿ ಸಂದೇಶಗಳು ಹರಡದಂತೆ ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ. ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಾದ ವಾಟ್ಸಾಪ್, ಫೇಸ್‌ಬುಕ್, ಎಕ್ಸ್ ಮತ್ತು ಇತರ ಡೇಟಾ ಸೇವೆಗಳು, ಮೊಬೈಲ್ ಇಂಟರ್‌ನೆಟ್ ಮತ್ತು ಬ್ರಾಡ್‌ಬ್ಯಾಂಡ್ ಸೇವೆಗಳ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಗೃಹ ಇಲಾಖೆ ತಿಳಿಸಿದೆ.
ಭಾರತೀಯ ಟೆಲಿಗ್ರಾಫ್ ಕಾಯಿದೆ,1885 ರ ಸೆಕ್ಷನ್ 5 (2) ರ ನಿಬಂಧನೆಗಳ ಅಡಿಯಲ್ಲಿ ಜಿಲ್ಲೆಯಾದ್ಯಂತ ಸೆಪ್ಟೆಂಬರ್ 30ರ ಮಧ್ಯರಾತ್ರಿ 2ರವರೆಗೆ 48 ಗಂಟೆಗಳ ಕಾಲ ಇಂಟರ್‌ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗುತ್ತದೆ ಎಂದು ಗೃಹ ಇಲಾಖೆಯ ಅಧಿಸೂಚನೆ ತಿಳಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ 9 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.