ನವದೆಹಲಿ: ಕೇಂದ್ರೀಯ ವಿಶ್ವವಿದ್ಯಾಲಯಗಳ ಐದು ವರ್ಷಗಳ ಇಂಟಿಗ್ರೇಟೆಡ್ ಕಾನೂನು ಪದವಿ ಕೋರ್ಸ್ ಪ್ರವೇಶಕ್ಕೆ ವಿಶ್ವವಿದ್ಯಾಲಯ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಯುಇಟಿ) ಕಡ್ಡಾಯ ಎಂಬ ಬಗ್ಗೆ ಪ್ರಮಾಣಪತ್ರ ಸಲ್ಲಿಸುವಂತೆ ದೆಹಲಿ ಹೈಕೋರ್ಟ್, ಯುಜಿಸಿಗೆ ಸೂಚಿಸಿದೆ.
ಮುಖ್ಯನ್ಯಾಯಮೂರ್ತಿ ಸತೀಶಚಂದ್ರ ಶರ್ಮಾ ಹಾಗೂ ನ್ಯಾಯಮೂರ್ತಿ ಸಂಜೀವ್ ನರೂಲಾ ಅವರಿದ್ದ ನ್ಯಾಯಪೀಠವು ಸೆ.12ರಂದು ಈ ಕುರಿತು ಆದೇಶ ಹೊರಡಿಸಿದೆ.
ಮೂರು ದಿನಗಳ ಒಳಗಾಗಿ ಪ್ರಮಾಣಪತ್ರ ಸಲ್ಲಿಸುವಂತೆ ಯುಜಿಸಿ ಅಧ್ಯಕ್ಷರಿಗೆ ನ್ಯಾಯಪೀಠ ನಿರ್ದೇಶನ ನೀಡಿದೆ.
ಅಲ್ಲದೇ, ಪ್ರಸಕ್ತ ಶೈಕ್ಷಣಿಕ ವರ್ಷ ಮಾತ್ರ ಸಿಎಲ್‌ಎಟಿ ಆಧಾರದ ಮೇಲೆ ಐದು ವರ್ಷಗಳ ಇಂಟಿಗ್ರೇಟೆಡ್ ಕಾನೂನು ಕೋರ್ಸ್‌ಗೆ ಪ್ರವೇಶ ನೀಡಲಾಗುತ್ತದೆಯೇ ಅಥವಾ ಮುಂದಿನ ವರ್ಷಗಳಲ್ಲಿಯೂ ಇದೇ ಮಾದರಿಯನ್ನು ಅನುಸರಿಸಲಾಗುತ್ತದೆಯೇ ಎಂಬುದನ್ನು ತಿಳಿಸುವಂತೆ ದೆಹಲಿ ವಿ.ವಿಗೆ ನಿರ್ದೇಶನ ನೀಡಿರುವ ನ್ಯಾಯಪೀಠ ವಿಚಾರಣೆಯನ್ನು ಸೆ.18ಕ್ಕೆ ಮುಂದೂಡಿದೆ.
ಸಿಎಲ್‌ಎಟಿ–ಯುಜಿ (ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ–ಯುಜಿ) ಆಧಾರದಲ್ಲಿ ಮಾತ್ರ ಐದು ವರ್ಷಗಳ ಕಾನೂನು ಕೋರ್ಸ್‌ಗೆ ಪ್ರವೇಶ ನೀಡಲಾಗುವುದು ಎಂಬ ದೆಹಲಿ ವಿಶ್ವವಿದ್ಯಾಲಯದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ಈ ನಿರ್ದೇಶನ ನೀಡಿದೆ.
ಸಿಯುಇಟಿ ಕಡ್ಡಾಯ ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಹೇಳಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.