ಶನಿವಾರ, 14 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಘನತ್ಯಾಜ್ಯ ವಿಲೇವಾರಿಯಲ್ಲಿ ನಿರ್ಲಕ್ಷ್ಯ: ರಾಜ್ಯಗಳ ಮೇಲೆ ಹಸಿರುಪೀಠ ಆಕ್ರೋಶ

ಫಾಲೋ ಮಾಡಿ
Comments

ನವದೆಹಲಿ: ಪರಿಸರ ಸಂರಕ್ಷಣಾ ಕಾನೂನುಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ವಿಫಲವಾದ ರಾಜ್ಯ ಸರ್ಕಾರಗಳ ವಿರುದ್ಧ ರಾಷ್ಟ್ರೀಯ ಹಸಿರು ನ್ಯಾಯ ಪೀಠ (ಎನ್‌ಜಿಟಿ) ಕಿಡಿಕಾರಿದೆ.

‘ರಾಜ್ಯದ ಅಧಿಕಾರಿಗಳು ತಮ್ಮನ್ನು ಕಾನೂನಿಗಿಂತ ಮೇಲ್ಪಟ್ಟವರು ಎಂದು ಪರಿಗಣಿಸಿದಂತೆ ತೋರುತ್ತಿದೆ. ಕಾನೂನುಗಳನ್ನು ಉಲ್ಲಂಘಿಸುವ ಮೂಲಕ ಸಾರ್ವಜನಿಕ ಆರೋಗ್ಯಕ್ಕೆ ಹಾನಿ ಉಂಟು ಮಾಡುವುದು ಮುಂದುವರಿದಿದೆ. ಇದು ಅತ್ಯಂತ ದುರದೃಷ್ಟಕರ ಪರಿಸ್ಥಿತಿಯಾಗಿದ್ದು, ಪರಿಹಾರ ಕ್ರಮಗಳ ಅಗತ್ಯವಿದೆ’ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ಉತ್ತರ ಪ್ರದೇಶದಲ್ಲಿ ಕಸ ವಿಲೇವಾರಿಗೆ ಸಂಬಂಧಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆದರ್ಶ ಕುಮಾರ್ ಗೋಯಲ್ ನೇತೃತ್ವದ ಎನ್‌ಜಿಟಿ ಪ್ರಧಾನ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಬಿಜ್ನೋರ್ ಜಿಲ್ಲೆಯ ಚಾಂಗಿಪುರದ ಮುಖ್ಯರಸ್ತೆಯಲ್ಲಿ ಅವೈಜ್ಞಾನಿಕವಾಗಿ ಕಸ ಚೆಲ್ಲಿರುವುದನ್ನು ಪ್ರಶ್ನಿಸಿ ನೂರ್ಪುರ ಪುರಸಭೆ ವಿರುದ್ಧ ದೂರು ದಾಖಲಿಸಲಾಗಿದೆ. ಅರವಿಂದ ಕುಮಾರ್ ಮತ್ತು ಇತರರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಪೀಠ ವಿಚಾರಣೆ ನಡೆಸಿತು.

ವೈಜ್ಞಾನಿಕವಾಗಿ ಘನತ್ಯಾಜ್ಯ ವಿಲೇವಾರಿ ಮಾಡದ ಕಾರಣ, ಗಾಳಿಯ ಗುಣಮಟ್ಟ ಮತ್ತು ಸಾರ್ವಜನಿಕ ಆರೋಗ್ಯಕ್ಕೆ ಹಾನಿ ಉಂಟಾಗಿದೆ ಎಂದು ಕೋರ್ಟ್ ಹೇಳಿತು. ಉತ್ತರ ಪ್ರದೇಶ ಮಾಲಿನ್ಯ ನಿಯಂತ್ರಣ ಮಂಡಳಿ (ಪಿಸಿಬಿ) ಮತ್ತು ಬಿಜ್ನೋರ್ ಜಿಲ್ಲಾಧಿಕಾರಿಗೆ ಸರಿಯಾಗಿ ತ್ಯಾಜ್ಯ ನಿರ್ವಹಣೆ ಮಾಡುವಂತೆ ಸಲಹೆ ನೀಡಿತು. ನಿರ್ದೇಶನಗಳಿಗೆ ಅನುಗುಣವಾಗಿ ಯಾವುದೇ ತೃಪ್ತಿದಾಯಕ ಕ್ರಮಗಳನ್ನು ಕೈಗೊಳ್ಳದಿದ್ದರೆ, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ನ್ಯಾಯಪೀಠ ಎಚ್ಚರಿಸಿದೆ.

2016ರ ಘನತ್ಯಾಜ್ಯ ನಿರ್ವಹಣಾ ನಿಯಮ 15ರ ಅಡಿಯಲ್ಲಿ, ಘನ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಯೋಜನೆಯನ್ನು ಸಿದ್ಧಪಡಿಸಬೇಕಾಗಿದೆ ಎಂದು ಎನ್‌ಜಿಟಿ ಹೇಳಿದೆ. ‘ದುರದೃಷ್ಟವೆಂದರೆ, ಪ್ರಸ್ತುತ ನಿಯಮಗಳು ಜಾರಿಯಾಗಿ ಐದು ವರ್ಷ ಕಳೆದಿವೆ, ವಾಯು ಮಾಲಿನ್ಯ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾಯ್ದೆ–1981 ಜಾರಿಯಾಗಿ 40 ವರ್ಷ ಕಳೆದಿವೆ. ಹೀಗಿದ್ದರೂ ಘನತ್ಯಾಜ್ಯ ವೈಜ್ಞಾನಿಕ ವಿಲೇವಾರಿಯಲ್ಲಿ ಅಧಿಕಾರಿಗಳ ವೈಫಲ್ಯ ಕಂಡುಬಂದಿದೆ. ತ್ಯಾಜ್ಯ, ಗಾಳಿ ಮತ್ತು ಸಾರ್ವಜನಿಕ ಆರೋಗ್ಯಕ್ಕೆ ಹಾನಿಯಾಗದಂತೆ ತಡೆಯಲು ಆಗಿಲ್ಲ’ ಎಂದು ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ಶಾಸನಬದ್ಧ ಜವಾಬ್ದಾರಿಯನ್ನು ನಿರ್ವಹಿಸುವಲ್ಲಿ ವಿಫಲವಾದರೆ, ಪರಿಸರ (ಸಂರಕ್ಷಣೆ) ಕಾಯ್ದೆ 1986ರ (ಇಪಿ ಕಾಯ್ದೆ) ಅಡಿಯಲ್ಲಿ ಜೈಲು ಶಿಕ್ಷೆ ಮತ್ತು ದಂಡ ವಿಧಿಸಬಹುದು ಎಂದು ನ್ಯಾಯಪೀಠ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT