ಜಮ್ಮು: ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿಯಲ್ಲಿ ಟಿಕೆಟ್ ಹಂಚಿಕೆ ಬಿಕ್ಕಟ್ಟು ಮುಂದುವರಿದಿದ್ದು ಬಿಜೆಪಿಯ ಹಿರಿಯ ನಾಯಕ ಚಂದರ್ ಮೋಹನ್ ಶರ್ಮಾ ಶುಕ್ರವಾರ ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದು, ಪಕ್ಷೇತರರಾಗಿ ಸ್ಪರ್ಧಿಸುವ ಬೆದರಿಕೆ ಹಾಕಿದ್ದಾರೆ.
ಜಮ್ಮು ಪ್ರದೇಶದ ವಿವಿಧ ಜಿಲ್ಲೆಗಳಲ್ಲಿ ಬಿಜೆಪಿ ಟಿಕೆಟ್‌ಗಾಗಿ ಕೆಲವು ಮುಖಂಡರ ಕಾರ್ಯಕರ್ತರ ಜೊತೆಗೂಡಿ ಪ್ರತಿಭಟನೆ ನಡೆಸುತ್ತಿದ್ದಾರೆ. ಜಮ್ಮು ಉತ್ತರ, ಜಮ್ಮು ಪೂರ್ವ, ಪದ್ದಾರ್, ರಿಯಾಸಿ ಮತ್ತು ಅಖ್ನೂರ್ ಕ್ಷೇತ್ರಗಳಲ್ಲಿ ಬಿಜೆಪಿಗೆ ಬಂಡಾಯದ ಬಿಸಿ ತಟ್ಟಿದೆ.
ಕೇಂದ್ರ ಸಚಿವರಾದ ಜಿ.ಕೆ. ರೆಡ್ಡಿ ಮತ್ತು ಜಿತೇಂದ್ರ ಸಿಂಗ್ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಸೇರಿದಂತೆ ಹಿರಿಯ ಬಿಜೆಪಿ ನಾಯಕರು ಬಂಡಾಯ ಶಮನಗೊಳಿಸಲು ಜಮ್ಮುವಿನಲ್ಲಿ ಬೀಡುಬಿಟ್ಟಿದ್ದಾರೆ.
ಚಂದರ್ ಮೋಹನ್ ಶರ್ಮಾ ಅವರು ಮಾಧ್ಯಮಗಳ ಜೊತೆ ಮಾತನಾಡಿ, ನಾನು ಜನಸಂಘದ ಕಾಲದಿಂದಲೂ ಬಿಜೆಪಿಯಲ್ಲಿದ್ದೇನೆ. ಹಲವು ಸಲ ಪಕ್ಷಕ್ಕಾಗಿ ಜೈಲಿಗೆ ಹೋಗಿ ಬಂದಿದ್ದೇನೆ. ಆದರೂ ನನಗೆ ವರಷ್ಠರು ಟಿಕೆಟ್ ನಿರಾಕರಣೆ ಮಾಡಿದ್ದಾರೆ. ಟಿಕೆಟ್ ಕೊಡದಿದ್ದರೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವೆ ಎಂದು ಎಚ್ಚರಿಕೆ ನೀಡಿದ್ದಾರೆ.
2019ರಲ್ಲಿ ಜಮ್ಮು ಮತ್ತು ಕಾಶ್ಮೀರದ ರಾಜ್ಯ ಸ್ಥಾನಮಾನ ರದ್ದಾಗಿತ್ತು. ಇದಾಗಿ 10 ವರ್ಷಗಳ ಬಳಿಕ 90 ಸ್ಥಾನಗಳಿರುವ ವಿಧಾನಸಭೆಗೆ ಚುನಾವಣೆ ನಡೆಯುತ್ತಿದೆ.
ಕಾಶ್ಮೀರದಲ್ಲಿ ಸೆಪ್ಟೆಂಬರ್ 18, 25 ಮತ್ತು ಅಕ್ಟೋಬರ್ 1ರಂದು ಮೂರು ಹಂತಗಳಲ್ಲಿ ಮತದಾನ ನಡೆಯಲಿದೆ. ಅಕ್ಟೋಬರ್ 4ರಂದು ಫಲಿತಾಂಶ ಪ್ರಕಟವಾಗಲಿದೆ.