ನವದೆಹಲಿ: ಬಿಜೆಪಿ ನೇತೃತ್ವದ ಎನ್‌ಡಿಎಗೆ ಜನತಾ ದಳ (ಜಾತ್ಯತೀತ) ಸೇರುತ್ತಿರುವುದು ಕರ್ನಾಟಕದಲ್ಲಿ ಮಾತ್ರವಲ್ಲದೆ ಇಡೀ ದಕ್ಷಿಣ ಭಾರತದಲ್ಲಿ ಮೈತ್ರಿಯನ್ನು ಬಲಪಡಿಸುತ್ತದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.
ಗೋವಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಾವಂತ್, ಜೆಡಿಎಸ್ ಪಕ್ಷವು ಎನ್‌ಡಿಎ ಸೇರುವುದು ಒಳ್ಳೆಯ ಸುದ್ದಿ, ಇದು ಕೇಂದ್ರದಲ್ಲಿ ಎನ್‌ಡಿಎಯನ್ನು ಮತ್ತಷ್ಟು ಬಲಪಡಿಸುತ್ತದೆ ಮತ್ತು ಕರ್ನಾಟಕದ ಎಲ್ಲಾ ಲೋಕಸಭಾ ಸ್ಥಾನಗಳಲ್ಲಿಯೂ ಗೆಲ್ಲುತ್ತದೆ. ಅಲ್ಲದೆ, ಈ ಮೈತ್ರಿಯು ಕರ್ನಾಟಕದಲ್ಲಿ ಎನ್‌ಡಿಎಗೆ ಮಾತ್ರವಲ್ಲ, ಇಡೀ ದಕ್ಷಿಣ ಭಾರತಕ್ಕೆ ಪ್ರಯೋಜನಕಾರಿಯಾಗಲಿದೆ ಎಂದು ಹೇಳಿದರು.
ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಪ್ರಮುಖ ಪಕ್ಷಗಳಾಗಿರುವ ಕರ್ನಾಟಕದಲ್ಲಿ ಜೆಡಿಎಸ್ ಪ್ರಬಲ ಮೂರನೇ ಪಕ್ಷವಾಗಿ ಗುರುತಿಸಿಕೊಂಡಿದೆ. ರಾಜ್ಯದಲ್ಲಿ ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷ (ಜೆಡಿಎಸ್) ಮೂರನೇ ಸ್ಥಾನದಲ್ಲಿದ್ದು, ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿತ್ತು.
ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಅಭಿನಂದಿಸಿದ ಸಾವಂತ್, ಇದು ಐತಿಹಾಸಿಕ ಕ್ಷಣವಾಗಿದ್ದು, ಮಸೂದೆ ಜಾರಿಗೆ ಬಂದ ನಂತರ 40 ಸದಸ್ಯ ಬಲವಿರುವ ಗೋವಾ ವಿಧಾನಸಭೆಯಲ್ಲಿ 13 ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲಾಗುವುದು ಎಂದು ಹೇಳಿದರು.
ಮುಂಬರುವ ಲೋಕಸಭೆ ಚುನಾವಣೆಗೆ ಜೆಡಿಎಸ್ – ಬಿಜೆಪಿ ಮೈತ್ರಿ ಮಾಡಿಕೊಳ್ಳುವುದರ ಕುರಿತು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿ ಅವರು ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೆ ದೆಹಲಿಯಲ್ಲಿ ಮಾತುಕತೆ ನಡೆಸಿದರು. ಈ ಸಭೆಯಲ್ಲಿ ಗೋವಾ ಮುಖ್ಯಮಂತ್ರಿ ಸಾವಂತ್ ಕೂಡ ಉಪಸ್ಥಿತರಿದ್ದರು.
ಮಾತುಕತೆ ನಡೆಸಿದ ಬಳಿಕ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ನೇತೃತ್ವದ ಜೆಡಿಎಸ್ ಪಕ್ಷವು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವುದಾಗಿ ಘೋಷಿಸಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.