ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಜಮ್ಮು ಮತ್ತು ಕಾಶ್ಮೀರ ಇನ್ನು ಸಂಪೂರ್ಣ ರಾಜ್ಯ ಸ್ಥಾನಮಾನಕ್ಕಾಗಿ ಕಾಯುತ್ತಿದೆ ಎಂದು ಹೇಳಿದೆ.
‘ರಾಜ್ಯದಲ್ಲಿ ಇತ್ತೀಚೆಗೆ ಲೆಫ್ಟಿನೆಂಟ್ ಗವರ್ನರ್‌ಗೆ ಹೆಚ್ಚಿನ ಅಧಿಕಾರ ನೀಡಿದೆ. ಆದರೆ ಕೇಂದ್ರ ಸರ್ಕಾರದ ಈಗಿನ ನಡೆ ಹೊಸದಾಗಿ ಆಯ್ಕೆಯಾದ ಸರ್ಕಾರವನ್ನು ಅಣಕಿಸಿದಂತಿದೆ’ ಎಂದು ಜೈರಾಮ್ ರಮೇಶ್ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ‘ಕಳೆದ 5 ವರ್ಷಗಳಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಪೂರ್ಣ ಪ್ರಮಾಣದ ರಾಜ್ಯ ಸ್ಥಾನಮಾನ ಮರು ಸ್ಥಾಪನೆ ಮಾಡಿ, ವಿಧಾನಸಭೆ ಚುನಾವಣೆ ಮಾಡುವಂತೆ ಕಾಂಗ್ರೆಸ್ ಬೇಡಿಕೆಯಿಡುತ್ತಲೇ ಇದೆ. ಆದರೆ ರಾಜ್ಯ ಇನ್ನೂ ರಾಜ್ಯ ಸ್ಥಾನಮಾನಕ್ಕಾಗಿ ಕಾಯುತ್ತಿದೆ’ ಎಂದಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಮೂರ ಹಂತಗಳಲ್ಲಿ ಚುನಾವಣೆ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ. ಸೆ. 18ರಿಂದ ಮತದಾನ ಆರಂಭವಾಗಲಿದ್ದು ಅ.1ಕ್ಕೆ ಮುಕ್ತಾಯಗೊಳ್ಳಲಿದೆ. ಅ.4ರಂದು ಮತಎಣಿಕೆ ನಡೆಯಲಿದೆ.
ಈ ಹಿಂದೆ 2014ರ ನವೆಂಬರ್–ಡಿಸೆಂಬರ್‌ನಲ್ಲಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆದಿತ್ತು. ಬಳಿಕ 2019ರಲ್ಲಿ ಆರ್ಟಿಕಲ್ 370 ರದ್ದತಿ ಬಳಿಕ ಚುನಾವಣೆ ನಡೆದಿರಲಿಲ್ಲ. ಕಳೆದ ತಿಂಗಳು ರಾಜ್ಯದಲ್ಲಿ ಪೊಲೀಸ್ ಇಲಾಖೆಗೆ ಸಂಬಂಧಿಸಿದ ನಿರ್ಧಾರ ಕೈಗೊಳ್ಳಲು ಕೇಂದ್ರ ಸರ್ಕಾರ ಲೆಫ್ಟಿನೆಂಟ್ ಗವರ್ನರ್‌ಗೆ ಹೆಚ್ಚಿನ ಅಧಿಕಾರವಹಿಸಿತ್ತು.