ಕೋಲ್ಕತ್ತ: ಆರ್.ಜಿ.ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ವೈದ್ಯ ವಿದ್ಯಾರ್ಥಿನಿ ಹತ್ಯೆ, ಅತ್ಯಾಚಾರ ಖಂಡಿಸಿ ಪಶ್ಚಿಮ ಬಂಗಾಳದಲ್ಲಿ ಕಿರಿಯ ವೈದ್ಯರು ನಡೆಸುತ್ತಿರುವ ಪ್ರತಿಭಟನೆ 12ನೇ ದಿನಕ್ಕೆ ಕಾಲಿಟ್ಟಿದೆ. ಪರಿಣಾಮ ಆರೋಗ್ಯ ಸೇವೆಗಳಲ್ಲಿ ವ್ಯತ್ಯಯವಾಗಿದೆ.
ಹಲವು ಸರ್ಕಾರಿ ಆಸ್ಪತ್ರೆಗಳ ಎದುರು ರೋಗಿಗಳು ಉದ್ದನೆಯ ಸಾಲಿನಲ್ಲಿ ನಿಂತಿದ್ದು, ಹಿರಿಯ ವೈದ್ಯರು ಮತ್ತು ಸಹಾಯಕ ಪ್ರಾಧ್ಯಾಪಕರು ಒಪಿಡಿಗಳಲ್ಲಿ ರೋಗಿಗಳನ್ನು ತಪಾಸಣೆ ಮಾಡುತ್ತಿದ್ದಾರೆ.
‘ನಮ್ಮ ಸಹೋದರಿಗೆ ನ್ಯಾಯ ಸಿಗುವವರೆಗೆ ಈ ಪ್ರತಿಭಟನೆ ಮುಂದುವರಿಯಲಿದೆ. ಜತೆಗೆ ಕೆಲಸದ ಸ್ಥಳದಲ್ಲಿ ಭದ್ರತೆ ಬೇಕಿದೆ. ಕೃತ್ಯ ಎಸಗಿದ ಅಪರಾಧಿಗಳಿಗೆ ಶಿಕ್ಷೆಯಾಗಬೇಕು ಎನ್ನುವುದು ನಮ್ಮ ಮುಖ್ಯ ಬೇಡಿಕೆ’ ಎಂದು ಪ್ರತಿಭಟನನಿರತ ವೈದ್ಯರೊಬ್ಬರು ಪಿಟಿಐಗೆ ಪ್ರತಿಕ್ರಿಯಿಸಿದ್ದಾರೆ.
ಕಳೆದ ವಾರ ಕಲ್ಕತ್ತ ಹೈಕೋರ್ಟ್ ಆದೇಶದಂತೆ ಸಿಬಿಐ ಪ್ರಕರಣದ ತನಿಖೆ ನಡೆಸುತ್ತಿದೆ. ಈ ಸಂಬಂಧ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿರುವ ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ.