ಭೋಪಾಲ್: ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಸೋಮವಾರ ಸಚಿವ ಸಂಪುಟವನ್ನು ವಿಸ್ತರಣೆ ಮಾಡಿದ್ದು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯ ವರ್ಗೀಯ, ಕೇಂದ್ರದ ಮಾಜಿ ಸಚಿವ ಪ್ರಹ್ಲಾದ್ ಪಟೇಲ್ ಸೇರಿದಂತೆ ಒಟ್ಟು 28 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಮಂಗೂಭಾಯ್ ಪಟೇಲ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.
28 ಮಂದಿ ಪೈಕಿ 18 ಮಂದಿ ಸಂಪುಟ ದರ್ಜೆ ಸಚಿವರಾಗಿ, 10 ಮಂದಿ ರಾಜ್ಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ಮಧ್ಯಪ್ರದೇಶ ವಿಧಾನಸಭೆಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 163 ಸ್ಥಾನಗಳನ್ನು ಪಡೆಯುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದಿತ್ತು. ಡಿಸೆಂಬರ್ 13ರಂದು ಮೋಹನ್ ಯಾದವ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು.