ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಯಲಲಿತಾ ಆಭರಣ ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಕ್ಕೆ ಹೈಕೋರ್ಟ್ ತಡೆ

Published 5 ಮಾರ್ಚ್ 2024, 15:07 IST
Last Updated 5 ಮಾರ್ಚ್ 2024, 15:07 IST
ಅಕ್ಷರ ಗಾತ್ರ

ಬೆಂಗಳೂರು: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಜಯಲಲಿತಾ ವಿರುದ್ಧದ ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ವಶಕ್ಕೆ ಪಡೆಯಲಾದ ಚಿನ್ನಾಭರಣಗಳನ್ನು ನಗರದ ವಿಶೇಷ ನ್ಯಾಯಾಲಯದ ಸುಪರ್ದಿಯಿಂದ ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಹಸ್ತಾಂತರ ಪ್ರಕ್ರಿಯೆ ಪ್ರಶ್ನಿಸಿ ಜಯಲಲಿತಾ ಅವರ ಅಣ್ಣ ಜಯಕುಮಾರ್‌ ಪುತ್ರಿ ಜೆ.ದೀಪಾ ಸಲ್ಲಿಸಿರುವ ಕ್ರಿಮಿನಲ್‌ ಮೇಲ್ಮನವಿಯನ್ನು ನ್ಯಾಯಮೂರ್ತಿ ಪಿ.ಎಂ.ನವಾಜ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ‘ದಿವಂಗತ ಜಯಲಲಿತಾ ಅವರಿಗೆ ಸೇರಿದ ಚಿನ್ನಾಭರಣಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸುವಂತೆ ನಗರದ 36ನೇ ಹೆಚ್ಚುವರಿ ಸಿಟಿ ಸಿವಿಲ್‌ ಕೋರ್ಟನ್‌ ವಿಶೇಷ ನ್ಯಾಯಾಲಯ 2023ರ ಜುಲೈ 12ರಂದು ಆದೇಶಿಸಿದೆ. ಆದರೆ, ಅರ್ಜಿದಾರರಾದ ಜೆ.ದೀಪಾ ಅವರು ಜಯಲಲಿತಾರ ಕಾನೂನು ಬದ್ಧ ವಾರಸುದಾರರಾಗಿದ್ದು, ಎಲ್ಲ ಚಿನ್ನಾಭರಣಗಳನ್ನು ಅವರಿಗೇ ಹಸ್ತಾಂತರಿಸಲು ನಿರ್ದೇಶಿಸಬೇಕು. ಅರ್ಜಿ ಇತ್ಯರ್ಥಗೊಳ್ಳುವ ಮೊದಲು ವಿಶೇಷ ನ್ಯಾಯಾಲಯದ ಆದೇಶಕ್ಕೆ ಮಧ್ಯಂತರ ತಡೆ ನೀಡಬೇಕು’ ಎಂದು ಕೋರಿದರು.

ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, ‘ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಿ’ ಎಂದು ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್‌ ಕಿರಣ್‌ ಎಸ್‌. ಜವಳಿ ಅವರಿಗೆ ನಿರ್ದೇಶಿಸಿ ವಿಚಾರಣೆಯನ್ನು ಇದೇ 26ಕ್ಕೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT