ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಇಂದು (ಮಂಗಳವಾರ), ನೂತನವಾಗಿ ನೇಮಕಗೊಂಡಿರುವ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಕಾರ್ಯದರ್ಶಿ ಹಾಗೂ ಜಂಟಿ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿದ್ದಾರೆ.
ಈ ವೇಳೆ ಪಕ್ಷವನ್ನು ಬಲಪಡಿಸುವ ಕುರಿತು ಚರ್ಚಿಸಲಾಯಿತು.
ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಎಐಸಿಸಿ ಕಾರ್ಯದರ್ಶಿ ಹಾಗೂ ಜಂಟಿ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿರುವ ನಾಯಕರು, ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಸಲಹೆಗಳನ್ನು ಪಡೆದುಕೊಂಡರು ಎಂದು ಮೂಲಗಳು ತಿಳಿಸಿವೆ.
ಕೆಲವು ದಿನಗಳ ಹಿಂದೆಯಷ್ಟೇ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಎಐಸಿಸಿ ನೂತನ ಕಾರ್ಯದರ್ಶಿ ಹಾಗೂ ಜಂಟಿ ಕಾರ್ಯದರ್ಶಿಗಳನ್ನು ನೇಮಿಸಲಾಗಿತ್ತು. ಕರ್ನಾಟಕದ ಏಳು ಮುಖಂಡರು ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದರು.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಮಾಹಿತಿ ನೀಡಿರುವ ಮಲ್ಲಿಕಾರ್ಜುನ ಖರ್ಗೆ, 'ನಾನು ಹೊಸದಾಗಿ ನೇಮಗೊಂಡಿರುವ ಎಐಸಿಸಿ ಕಾರ್ಯದರ್ಶಿ ಹಾಗೂ ಜಂಟಿ ಕಾರ್ಯದರ್ಶಿಗಳ ಸಭೆಯ ಅಧ್ಯಕ್ಷತೆ ವಹಿಸಿದ್ದೇನೆ. ಪ್ರತಿಯೊಬ್ಬ ಭಾರತೀಯ ಪ್ರಜೆಯನ್ನು ಕಾಂಗ್ರೆಸ್ ತಲುಪಲಿದೆ. ಸತ್ಯವನ್ನು ನುಡಿಯುವ ಮೂಲಕ ಪ್ರತಿಯೊಬ್ಬರ ಧ್ವನಿಯೊಂದಿಗೆ ನಮ್ಮ ಸಂಘಟನೆಯನ್ನು ಬಲಪಡಿಸಲು ಬದ್ಧರಾಗಿದ್ದೇವೆ' ಎಂದು ತಿಳಿಸಿದ್ದಾರೆ.