ಮಂಗಳವಾರ, 10 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೋಲ್ಕತ್ತ ಹಾರರ್‌: ಅತ್ಯಾಚಾರದ ನಂತರ ಹಲ್ಲೆ ನಡೆಸಿ ಕತ್ತು ಹಿಸುಕಿ ಕೊಲೆ!

ಕೋಲ್ಕತ್ತದಲ್ಲಿ ವೈದ್ಯ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆಯ ವಿವರಗಳು ಬಹಿರಂಗವಾಗಿವೆ.
Published 21 ಆಗಸ್ಟ್ 2024, 3:26 IST
Last Updated 21 ಆಗಸ್ಟ್ 2024, 3:26 IST
ಅಕ್ಷರ ಗಾತ್ರ

ಕೋಲ್ಕತ್ತ: ಕೋಲ್ಕತ್ತದಲ್ಲಿ ವೈದ್ಯ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆಯ ವಿವರಗಳು ಬಹಿರಂಗವಾಗಿವೆ.

ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ವೈದ್ಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಮಾಡಿ ಬಳಿಕ ಹಲ್ಲೆ ನಡೆಸಿ, ಕೈಗಳಿಂದ ಕತ್ತು ಹಿಸುಕಿ ಸಾಯಿಸಲಾಗಿದೆ ಎಂದು ತಿಳಿದು ಬಂದಿದೆ.

ವಿದ್ಯಾರ್ಥಿನಿಯ ದೇಹದ ಮೇಲೆ 16 ಗಾಯಗಳು ಹಾಗೂ ಆಂತರಿಕವಾಗಿ 9 ಗಾಯಗಳಿವೆ ಎಂಬುದನ್ನು ಮರಣೋತ್ತರ ಪರೀಕ್ಷೆ ಖಚಿತಪಡಿಸಿದೆ.

ವಿದ್ಯಾರ್ಥಿನಿಯ ಜನನಾಂಗದಲ್ಲಿ ಬಲವಂತವಾಗಿ ಗಾಯ ಮಾಡಿರುವ ಗುರುತು ಕಂಡು ಬಂದಿದ್ದು ಲೈಂಗಿಕ ಶೋಷಣೆ ನಡೆದಿರುವುದನ್ನು ಸಾಬೀತುಪಡಿಸಿದೆ. ಕೊಲೆ ಹಾಗೂ ಅತ್ಯಾಚಾರದ ಹಿಂದೆ ಒಂದಕ್ಕಿಂತ ಹೆಚ್ಚು ವ್ಯಕ್ತಿಗಳು ಇದ್ದಾರೆ ಎಂದು ಮರಣೋತ್ತರ ಪರೀಕ್ಷೆ ಹೇಳಿದೆ. ಆಗಸ್ಟ್ 9 ರಂದು ಘಟನೆ ನಡೆದಿತ್ತು.

ಸದ್ಯ ಈ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸುತ್ತಿದ್ದು, ಸುಪ್ರೀಂಕೋರ್ಟ್ ಸಹ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ಪಶ್ಚಿಮ ಬಂಗಾಳ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.

ಅತ್ಯಾಚಾರ ಹಾಗೂ ಆಕೆಯ ಹತ್ಯೆ ‘ಭಯಾನಕ’ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲು ವಿಳಂಬ ಮಾಡಿದ್ದಕ್ಕೆ ಹಾಗೂ ಸರ್ಕಾರಿ ಸ್ವಾಮ್ಯದ ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಕಿಡಿಗೇಡಿಗಳ ವಿಧ್ವಂಸಕ ಕೃತ್ಯವನ್ನು ತಡೆಯದೆ ಇದ್ದುದಕ್ಕೆ ಪಶ್ಚಿಮ ಬಂಗಾಳ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.

ವೈದ್ಯರು ಹಾಗೂ ಆರೋಗ್ಯ ಸೇವೆಗಳನ್ನು ಒದಗಿಸುವ ಇತರ ವೃತ್ತಿಪರರ ಸುರಕ್ಷತೆಗಾಗಿ ನಿಯಮ ಗಳನ್ನು ರೂಪಿಸಲು 10 ಮಂದಿ ಸದಸ್ಯರ ರಾಷ್ಟ್ರೀಯ ಕಾರ್ಯಪಡೆಯನ್ನು ಕೂಡ ಅದು ರಚಿಸಿದೆ. ಈ ಸಮಿತಿಯು ಮೂರು ವಾರಗಳಲ್ಲಿ ಮಧ್ಯಂತರ ವರದಿಯನ್ನು ಸಲ್ಲಿಸಬೇಕಿದೆ. ಅಂತಿಮ ವರದಿ ಸಲ್ಲಿಕೆಗೆ ಎರಡು ತಿಂಗಳ ಗಡುವು ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT