ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಯೋತ್ಪಾದನೆ ವಿರುದ್ಧ ಮೃದು ಧೋರಣೆಯ ಸರ್ಕಾರವನ್ನು ಮಮತಾ ಬಯಸುತ್ತಾರೆ: ನಡ್ಡಾ

Published 28 ಏಪ್ರಿಲ್ 2024, 10:28 IST
Last Updated 28 ಏಪ್ರಿಲ್ 2024, 10:28 IST
ಅಕ್ಷರ ಗಾತ್ರ

ಬಹರಂಪುರ: ಕೇಂದ್ರದಲ್ಲಿ ಭಯೋತ್ಪಾದನೆ ವಿರುದ್ಧ ಮೃದು ಧೋರಣೆ ಹೊಂದಿರುವ ಸರ್ಕಾರ ಅಧಿಕಾರಕ್ಕೆ ಬರಲಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್‌ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಬಯಸುತ್ತಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಜೆ. ಪಿ ನಡ್ಡಾ ಆರೋಪಿಸಿದ್ದಾರೆ.

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಚುನಾವಣಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರವು ಭ್ರಷ್ಟಾಚಾರ, ಸುಲಿಗೆ, ತುಷ್ಟೀಕರಣ ಮತ್ತು ತಾರತಮ್ಯಕ್ಕೆ ಹೆಸರುವಾಸಿಯಾಗಿದೆ’ ಎಂದು ವಾಗ್ದಾಳಿ ನಡೆಸಿದ್ದಾರೆ.

ನಾವು ಬಲಿಷ್ಠ ಸರ್ಕಾರದ ಬಗ್ಗೆ ಮಾತನಾಡುತ್ತಿದ್ದೇವೆ. ಆದರೆ, ಮಮತಾ ಬ್ಯಾನರ್ಜಿಗೆ ದುರ್ಬಲ ಸರ್ಕಾರ ಬೇಕಿದೆ. ಭ್ರಷ್ಟಾಚಾರ, ತುಷ್ಟೀಕರಣ, ತಾರತಮ್ಯಗಳಲ್ಲಿ ನಂಬಿಕೆ ಹೊಂದಿರುವ ಮತ್ತು ಭಯೋತ್ಪಾಕರ ಪರ ಮೃದು ಧೋರಣೆ ತಳೆಯುವ ಸರ್ಕಾರ ಕೇಂದ್ರದಲ್ಲಿ ರಚನೆಯಾಗಲಿ ಎಂದು ಅವರು ಬಯಸುತ್ತಾರೆ ಎಂದು ಕಿಡಿಕಾರಿದ್ದಾರೆ.

‘ಒಳನುಸುಳುಕೋರರನ್ನು ಬೆಂಬಲಿಸುವ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ವಿರೋಧಿಸುವ ಬ್ಯಾನರ್ಜಿ ಅವರ ತುಷ್ಟೀಕರಣದ ರಾಜಕೀಯವನ್ನು ನಾವು ವಿರೋಧಿಸುತ್ತೇವೆ. ಅವರ ಸರ್ಕಾರವು ಭಯೋತ್ಪಾದಕರ ಬಗ್ಗೆ ಸಹಾನುಭೂತಿ ಹೊಂದಿದೆ’ ಎಂದು ನಡ್ಡಾ ಆರೋಪಿಸಿದ್ದಾರೆ.

ಸಂದೇಶ್‌ಖಾಲಿ ಪ್ರಕರಣವನ್ನು ಉಲ್ಲೇಖಿಸಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಮಮತಾ ಬ್ಯಾನರ್ಜಿ ಅವರ ಆಡಳಿತದಲ್ಲಿ ಮಹಿಳೆಯರು ಸುರಕ್ಷಿತವಾಗಿಲ್ಲ. ಮಹಿಳೆಯೊಬ್ಬರು ಆಡಳಿತ ನಡೆಸುತ್ತಿರುವ ರಾಜ್ಯದಲ್ಲಿ ಮಹಿಳೆಯರಿಗೆ ಕಿರುಕುಳ ನೀಡುವುದಕ್ಕಿಂತ ನಾಚಿಕೆಗೇಡಿನ ಸಂಗತಿ ಬೇರೆ ಏನಿದೆ’ ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ ನಡ್ಡಾ, ‘ತುಷ್ಟೀಕರಣ ರಾಜಕಾರಣದ ಮೂಲಕ ಒಬಿಸಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಹೋದರ ಸಹೋದರಿಯರ ಹಕ್ಕುಗಳನ್ನು ಕಸಿದುಕೊಳ್ಳಲು ಪಕ್ಷವು ಉತ್ಸುಕವಾಗಿದೆ. ಅಲ್ಲದೆ, ರಾಜಕೀಯ ಲಾಭಕ್ಕಾಗಿ ಮುಸ್ಲಿಮರನ್ನು ಓಲೈಸುತ್ತಿದೆ ಎಂದು ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT