ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಣಿಪುರ ಮತ್ತೆ ಉದ್ವಿಗ್ನ: 5 ದಿನಗಳ ಕಾಲ ಇಂಟರ್‌ನೆಟ್‌ ಸೇವೆ ಸ್ಥಗಿತ

ಸಂಘರ್ಷದಲ್ಲಿ ಒಬ್ಬ ವ್ಯಕ್ತಿ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ: ಆರೋಪ
Published 16 ಫೆಬ್ರುವರಿ 2024, 11:39 IST
Last Updated 16 ಫೆಬ್ರುವರಿ 2024, 11:39 IST
ಅಕ್ಷರ ಗಾತ್ರ

ಇಂಫಾಲ್ : ಪೊಲೀಸ್ ಕಾನ್‌ಸ್ಟೆಬಲ್ ಅವರನ್ನು ಅಮಾನತು ಮಾಡಿದ ಸರ್ಕಾರದ ಕ್ರಮವನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಇದು ಇನ್ನಷ್ಟು ಪ್ರದೇಶಕ್ಕೆ ವ್ಯಾಪಿಸದಂತೆ ತಡೆಯಲು ಮಣಿಪುರದ ಚುರಚಾಂದಪುರ ಜಿಲ್ಲೆಯಲ್ಲಿ  ಐದು ದಿನಗಳ ಕಾಲ ಇಂಟರ್‌ನೆಟ್‌ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.  

‘ಶುಕ್ರವಾರ ಬೆಳಿಗ್ಗೆಯಿಂದಲೇ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಉದ್ರಿಕ್ತರು ಪೊಲೀಸ್ ವರಿಷ್ಠಾಧಿಕಾರಿ ಮತ್ತು ಜಿಲ್ಲಾಧಿಕಾರಿ ಕಚೇರಿಗಳನ್ನು ಧ್ವಂಸಗೊಳಿಸಿದ್ದಾರೆ. ಕೇಂದ್ರೀಯ ಸಶಸ್ತ್ರ ಪೊಲೀಸ್‌ ಪಡೆಗಳು (ಸಿಎಪಿಎಫ್) ಬಳಸುವ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿನ ತ್ರಿವರ್ಣ ಧ್ವಜವನ್ನು ಕೆಳಕ್ಕೆ ಇಳಿಸಲಾಗಿದೆ’ ಎಂದು ಅಧಿಕಾರಿಯೊಬ್ಬರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. 

ಈ ಸಂಘರ್ಷದಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಪ್ರತಿಭಟನಕಾರರನ್ನು ಚದುರಿಸಲು ಭದ್ರತಾ ಪಡೆಗಳು ಅಶ್ರುವಾಯುವನ್ನು ಪ್ರಯೋಗಿಸಿದರು. 

‘ಬಂದೂಕುಧಾರಿಗಳೊಂದಿಗೆ ಇರುವ ವಿಡಿಯೊ ಹರಿದಾಡಿದ ಕಾರಣಕ್ಕೆ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಸೇವೆಯಿಂದ ಅಮಾನತು ಮಾಡಿರುವುದು ನ್ಯಾಯಯೋಚಿತವಲ್ಲ. ಅವರನ್ನು ಮತ್ತೆ ಸೇವೆಗೆ ನಿಯೋಜಿಸಬೇಕು’ ಎಂದು ಪ್ರತಿಭಟನಕಾರರು ಒತ್ತಾಯಿಸಿದ್ದಾರೆ. 

‘ಕೆಲವು ಸಮಾಜಘಾತುಕ ಶಕ್ತಿಗಳು, ಹಿಂಸಾಚಾರದ ವಿಡಿಯೊ ಮತ್ತು ಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುವುದರಿಂದ ಕಾನೂನು, ಸುವ್ಯವಸ್ಥೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಗಳಿವೆ. ಜನರ ಪ್ರಾಣಕ್ಕೂ ಸಂಚಕಾರ ಎದುರಾಗಬಹುದು. ಗಾಳಿಸುದ್ದಿಗಳು ಹರಿದಾಡುವುದರಿಂದ ಕೋಮು ಸೌಹಾರ್ದದ ಮೇಲೂ ಪರಿಣಾಮ ಬೀರಲಿದೆ’ ಎಂದು ಇಂಟರ್‌ನೆಟ್‌ ಸೇವೆ ಸ್ಥಗಿತ ಕುರಿತು ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT