ಕೋಲ್ಕತ್ತ: ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸತತ 14ನೇ ದಿನವೂ ಕಿರಿಯ ವೈದ್ಯರು ಕೆಲಸ ನಿಲ್ಲಿಸಿ ಬಂಗಾಳದಾದ್ಯಂತ ಪ್ರತಿಭಟನೆ ಮುಂದುವರಿಸಿದ್ದಾರೆ.
ಇದರಿಂದಾಗಿ ಕೋಲ್ಕತ್ತ ಮಹಾನಗರ ಸೇರಿದಂತೆ ಪಶ್ಚಿಮ ಬಂಗಾಳದಾದ್ಯಂತ ಆರೋಗ್ಯ ಸೇವೆಯಲ್ಲಿ ವ್ಯತ್ಯಯವಾಗಿದೆ. ಬಹುತೇಕ ಸರ್ಕಾರಿ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆಗಳು ಸ್ಥಗಿತಗೊಂಡಿವೆ.
ನಮ್ಮ ಸಹೋದರಿಯ ನ್ಯಾಯಕ್ಕಾಗಿ ನಾವು ಹೋರಾಟ ಮಾಡುತ್ತಿದ್ದೇವೆ, ನಮ್ಮ ಬಹುಮುಖ್ಯ ಬೇಡಿಕೆಯನ್ನು ಸರ್ಕಾರ ಈಡೇರಿಸಬೇಕಾಗಿದೆ. ಸುಪ್ರೀಂ ಕೋರ್ಟ್‌ನಲ್ಲಿ ಇಂದಿನ ಬೆಳವಣಿಗೆಗಳನ್ನು ಗಮನಿಸಿದ ನಂತರ ಮುಂದಿನ ನಿರ್ಧಾರ ಮಾಡುತ್ತೇವೆ ಎಂದು ಪ್ರತಿಭಟನಾ ನಿರತ ವೈದ್ಯರೊಬ್ಬರು ತಿಳಿಸಿದ್ದಾರೆ.
ದೇಶದಾದ್ಯಂತ ವೈದ್ಯರಿಂದ ವ್ಯಾಪಕ ಖಂಡನೆ, ಆಕ್ರೋಶ ವ್ಯಕ್ತವಾಗಿದೆ. ಸುಪ್ರೀಂ ಕೋರ್ಟ್‌ನಲ್ಲೂ ಕೂಡ ಈ ಪ್ರಕರಣದ ಬಗ್ಗೆ ವಿಚಾರಣೆ ನಡೆಯುತ್ತಿದೆ.
ಕಳೆದ ಗುರುವಾರ ಕೋಲ್ಕತ್ತದ ಆರ್.ಜಿ. ಕರ್ ವೈದ್ಯ ಕಾಲೇಜಿನಲ್ಲಿ ಕರ್ತವ್ಯ ನಿರತ 32 ವರ್ಷದ ಸ್ನಾತಕೋತ್ತರ ತರಬೇತಿ ವೈದ್ಯೆ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಲಾಗಿತ್ತು. ಘಟನೆ ಸಂಬಂಧ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ.