ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಚಾರಣೆಗೆ ಹಾಜರಾಗುವ ಸಮಯ ತಿಳಿಸಿ; ಜಾರ್ಖಂಡ್ ಸಿಎಂ ಸೊರೇನ್‌ಗೆ ಇ.ಡಿ. ಸಮನ್ಸ್‌

ಹಣ ಅಕ್ರಮ ವರ್ಗಾವಣೆ ಪ್ರಕರಣ
Published 30 ಡಿಸೆಂಬರ್ 2023, 6:22 IST
Last Updated 30 ಡಿಸೆಂಬರ್ 2023, 6:22 IST
ಅಕ್ಷರ ಗಾತ್ರ

ರಾಂಚಿ: ಭೂ ಹಗರಣ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಕುರಿತು ವಿಚಾರಣೆಗೆ ಹಾಜರಾಗುವ ಸಮಯ ತಿಳಿಸುವಂತೆ ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ಅವರಿಗೆ ಜಾರಿ ನಿರ್ದೇಶನಾಲಯ ಶನಿವಾರ ನೋಟಿಸ್‌ ಹಾಗೂ ಸಮನ್ಸ್‌ ನೀಡಿದೆ.

ವಿಚಾರಣೆಗೆ ಹಾಜರಾಗುವ ದಿನಾಂಕ, ಸಮಯ ಹಾಗೂ ಸ್ಥಳದ ಕುರಿತು ತನಿಖಾಧಿಕಾರಿಗಳಿಗೆ ತಿಳಿಸುವಂತೆ ಸೊರೇನ್‌ ಅವರಿಗೆ ಕೇಳಲಾಗಿದ್ದು, ವಿಚಾರಣೆ ವೇಳೆ ನೀಡುವ ಹೇಳಿಕೆಗಳನ್ನು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ದಾಖಲಿಸಿಕೊಳ್ಳಲಾಗುತ್ತದೆ ಎಂದೂ ತಿಳಿಸಲಾಗಿದೆ.

ಡಿಸೆಂಬರ್‌ 31ರೊಳಗೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಲಾಗಿದ್ದು, ತಪ್ಪಿದಲ್ಲಿ ಪಿಎಂಎಲ್‌ಎ ಅನುಸಾರ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದೂ ಎಚ್ಚರಿಸಿದೆ.

ಜಾರಿ ನಿರ್ದೇಶನಾಲಯವು ಸೊರೇನ್‌ ಅವರಿಗೆ ಕಳುಹಿಸಿದ ಏಳನೇ ನೋಟಿಸ್‌ ಅಥವಾ ಸಮನ್ಸ್ ಇದು. ಆದಾಗ್ಯೂ ಅವರು ವಿಚಾರಣೆಗೆ ಹಾಜರಾಗಿಲ್ಲ. ಆಗಸ್ಟ್‌ 14ರಂದು ಮೊದಲ ಸಮನ್ಸ್ ನೀಡಲಾಗಿತ್ತು. ಇದನ್ನು ಪ್ರಶ್ನಿಸಿ ಅವರು ಸುಪ್ರೀಂ ಹಾಗೂ ಹೈಕೋರ್ಟ್‌ ಮೆಟ್ಟಿಲೀರಿದ್ದರು.

ಜಾರ್ಖಂಡ್‌ನಲ್ಲಿ ರಾಜಕೀಯ ಅನಿಶ್ಚಿತತೆ ಮತ್ತು ಅಶಾಂತಿ ಸೃಷ್ಟಿಸುವ ಏಕೈಕ ಉದ್ದೇಶದಿಂದ ತಮಗೆ ಸಮನ್ಸ್ ನೀಡಲಾಗಿದೆ. ತಮ್ಮ ವಿರುದ್ಧ ಸುಳ್ಳು ಆರೋಪಗಳನ್ನು ಹೊರಿಸಲಾಗಿದೆ ಎಂದು ಸೊರೇನ್‌ ದೂರಿದ್ದರು.

ಆದರೆ, ಎರಡೂ ನ್ಯಾಯಾಲಯಗಳು ಸೊರೇನ್‌ ಮನವಿಯನ್ನು ತಿರಸ್ಕರಿಸಿದ್ದವು.

ಜಾರ್ಖಂಡ್‌ನಲ್ಲಿ ನಡೆದಿದೆ ಎನ್ನಲಾದ ಭಾರಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ ತನಿಖೆ ನಡೆಸುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್‌ ಅಧಿಕಾರಿ ಸೇರಿದಂತೆ ಈವರೆಗೆ ಒಟ್ಟು 14 ಆರೋಪಿಗಳನ್ನು ಬಂಧಿಸಲಾಗಿದೆ. 

ಜಾರ್ಖಂಡ್‌ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕರೂ ಆಗಿರುವ ಸೊರೇನ್, ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದ ಮತ್ತೊಂದು ಪ್ರಕರಣದಲ್ಲಿ 2022ರ ನವೆಂಬರ್‌ನಲ್ಲಿ ಇ.ಡಿ ವಿಚಾರಣೆಗೆ ಹಾಜರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT