ಮುಂಬೈ: ಭಯೋತ್ಪಾದಕ ದಾಳಿ ಬೆದರಿಕೆಯ ಕುರಿತು ಕೇಂದ್ರ ತನಿಖಾ ಸಂಸ್ಥೆಗಳು ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಪ್ರಮುಖ ಧಾರ್ಮಿಕ ಸ್ಥಳಗಳು ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
‘ಮುನ್ನೆಚ್ಚರಿಕೆ ಕ್ರಮವಾಗಿ ನಗರದ ಪ್ರಮುಖ ಧಾರ್ಮಿಕ ಸ್ಥಳಗಳು ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಯಾವುದೇ ಅನುಮಾನಾಸ್ಪದ ಚಟುವಟಿಕೆಗಳು ಕಂಡುಬಂದರೆ ತಕ್ಷಣ ಮಾಹಿತಿ ನೀಡುವಂತೆ ಎಲ್ಲಾ ದೇವಾಲಯಗಳಿಗೆ ಸೂಚನೆ ನೀಡಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಿರೀಕ್ಷೆಯಂತೆ ನವೆಂಬರ್‌ನಲ್ಲಿ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ನಡೆಯಲಿದೆ. ಜತೆಗೆ, ಪ್ರಮುಖ ಹಬ್ಬಗಳಾದ ದುರ್ಗಾಪೂಜೆ, ದಸರಾ ಮತ್ತು ದೀಪಾವಳಿಗಾಗಿ ಸಜ್ಜಾಗುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರದಾದ್ಯಂತ ಎಚ್ಚರವಹಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.